ಬೆಂಗಳೂರು
ಹುಕ್ಕಾ ಸೇವನೆ, ಮಾರಾಟ ಮತ್ತು ಜಾಹೀರಾತು ನಿಷೇಧಿಸಿ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಆ ಮೂಲಕ ಕೋರ್ಟ್ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ. ಹುಕ್ಕಾ ಪಾರ್ಲರ್ ನಡೆಸುತ್ತಿದ್ದವರಿಗೆ ಕಾನೂನು ಹೋರಾಟದಲ್ಲಿ ತೀವ್ರ ಹಿನ್ನಡೆಯಾಗಿದೆ. ಅಲ್ಲದೆ, ಒಮ್ಮೆ ಹುಕ್ಕಾ ಸೇವನೆ 100 ಸಿಗರೇಟಿಗೆ ಸಮ ಎನ್ನುವ ಮಧ್ಯಂತರ ಅರ್ಜಿದಾರರ ವಾದವನ್ನು ನ್ಯಾಯಾಲಯ ಮಾನ್ಯ ಮಾಡಿದೆ.
ಬೆಂಗಳೂರಿನ ಆರ್. ಭರತ್ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಈ ಆದೇಶ ಪ್ರಕಟಿಸಿತು. “ಸಾರ್ವಜನಿಕ ಹಿತದೃಷ್ಟಿಯಿಂದ ಹುಕ್ಕಾ ನಿಷೇಧ ಸರಿ ಇದೆ. ಅಂತಹ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಇಷ್ಟು ದಿನ ಅವುಗಳ ನಿಯಂತ್ರಣ ಮಾಡಿರಲಿಲ್ಲ. ರಾಜ್ಯದಲ್ಲಿ ಸುಮಾರು 800 ಹುಕ್ಕಾ ಬಾರ್‌ಗಳಿದ್ದು ಅವುಗಳನ್ನು ನಿಯಂತ್ರಿಸುವುದು ಅಗತ್ಯ. ಆ ಕಾರಣಕ್ಕೆ ಸರ್ಕಾರದ ಆದೇಶ ಸರಿ ಇದೆ” ಎಂದು ಹೇಳಿದೆ.
ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲರು, “ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ, ವಹಿವಾಟು, ಉತ್ಪಾದನೆ, ಪೂರೈಕೆ ಮತ್ತು ಹಂಚಿಕೆ ಕಾಯ್ದೆದೆ 2003 (ಸಿಒಟಿಪಿಎ) ಕೇಂದ್ರ ಸರ್ಕಾರದ ಕಾನೂನಾಗಿದ್ದು, ಇಲ್ಲಿ ಹುಕ್ಕಾ ನಿಷೇಧಕ್ಕೆ ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ. ಆಹಾರ ಪೂರೈಸದ ನಿರ್ದಿಷ್ಟ ಸ್ಥಳಗಳಲ್ಲಿ ಹುಕ್ಕಾ ಸೇದಲು ಅವಕಾಶವಿದೆ” ಎಂದಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ