ಎಸ್‌ಡಿಪಿಐನ ದಕ್ಷಿಣ ಕನ್ನಡ ಜಿಲ್ಲಾಪ್ರಧಾನ ಕಾರ್ಯದರ್ಶಿ ಅನ್ವರ್‌ಸಾದತ್ ಸಲ್ಲಿಸಿರುವ ಅರ್ಜಿ ಕುರಿತು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಸೋಮವಾರ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿತು, ನಂತರ ತೀರ್ಪು ಕಾಯ್ದಿರಿಸಿರುವುದಾಗಿ ಪ್ರಕಟಿಸಿತು.
ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾಗೆ (ಎಸ್‌ಡಿಪಿಐ) ಸೇರಿದ ಕಚೇರಿಗಳ ಮೇಲೆ ದಾಳಿ ನಡೆಸಿ, ವಸ್ತುಗಳನ್ನು ಜಪ್ತಿ ಮಾಡಿ ಕಚೇರಿಗಳಿಗೆ ಬೀಗ ಹಾಕಿರುವ ಪ್ರಕರಣದ ಕುರಿತ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ರಾಜ್ಯ ಸರ್ಕಾರಿ ವಕೀಲರು, ಎಸ್‌ಡಿಪಿಐ ಕಚೇರಿಗಳನ್ನು ನಿಷೇಧಿತ ಪಿಎಫ್‌ಐ ಮತ್ತು ಸಿಎಫ್‌ಐ ಸಂಘಟನೆಗಳ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿತ್ತು ಎಂಬ ಖಚಿತ ಮಾಹಿತಿ ಆಧರಿಸಿ ಜಿಲ್ಲಾಧಿಕಾರಿಗಳು ಅಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದನ್ನು ದೃಢಪಡಿಸಿಕೊಂಡ ನಂತರವೇ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.
ಕೇಂದ್ರ ರಾಜ್ಯಗಳಿಗೆ ನಿಯೋಜಿಸಿರುವ ಅಧಿಕಾರವನ್ನು ಆಧರಿಸಿ ಜಿಲ್ಲಾಡಳಿತ ಸಮಗ್ರ ಮಾಹಿತಿ ಕಲೆಹಾಕಿ, ತನಿಖೆ ನಡೆಸಿ, ಶಾಂತಿ ಭಂಗ ಹಾಗೂ ಸಾರ್ವಜನಿಕ ಸುವ್ಯವಸ್ಥೆ ಹಾಳು ಮಾಡುವ ಉದ್ದೇಶದ ಕೃತ್ಯಗಳನ್ನು ನಡೆಸುತ್ತಿದೆ ಎಂಬುದನ್ನು ತಿಳಿದು ಎಸ್‌ಡಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಿ ನಂತರ ಅವುಗಳನ್ನು ಸೀಲ್ ಮಾಡಲಾಗಿದೆ ಎಂದು ಹೇಳಿದರು. ಕೇಂದ್ರ ಸರ್ಕಾರಿ ವಕೀಲರೂ ಸಹ ರಾಜ್ಯ ಸರ್ಕಾರದ ವಾದವನ್ನು ಬೆಂಬಲಿಸಿದರು.