ಶ್ರೀನಗರ:
2019 ರಲ್ಲಿ ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದುಮಾಡುವ ಮೂಲಕ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿತ್ತು. ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದವು.
ಹಲವು ಸುತ್ತಿನ ವಾದ-ವಿವಾದಗಳ ನಂತರ ಇಂದು ಸೋಮವಾರ ಸುಪ್ರೀಂ ಕೋರ್ಟ್ ಈ ವಿಷಯಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಲಿದೆ. ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಈ ಹಿನ್ನೆಲೆಯಲ್ಲಿ ಇಂದು ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು ತೀವ್ರ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ, ನಾವು ಯಾವ ಭರವಸೆ ಇಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಅಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದೇವೆಯೋ ಅದೇ ಭರವಸೆ ಇಂದು ಕೂಡ ಇದೆ. ನಮಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿದೆ ಎಂದಿದ್ದಾರೆ.
ಒಂದು ವೇಳೆ ಸುಪ್ರೀಂ ಕೋರ್ಟ್ ತೀರ್ಪು ನಮ್ಮ ವಿರುದ್ಧವಾಗಿ ಬಂದರೆ ಸಂವಿಧಾನದ ಚೌಕಟ್ಟಿನೊಳಗೆ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪಿಸಲು ಶಾಂತಿಯುತವಾಗಿ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದಿದ್ದಾರೆ.
ಸಂವಿಧಾನ ವಿಧಿ 370 ನೇ ವಿಧಿಯನ್ನು ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ 23 ಅರ್ಜಿಗಳು ಸಲ್ಲಿಕೆಯಾಗಿದ್ದವು. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಈ ಅರ್ಜಿಗಳ ವಾದ-ವಿವಾದ ಆಲಿಸಿದ ನಂತರ ತನ್ನ ತೀರ್ಪನ್ನು ಕಳೆದ ಸೆಪ್ಟೆಂಬರ್ 5 ರಂದು ಕಾಯ್ದಿರಿಸಿತ್ತು.
ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಈ ಹಿಂದೆ ಹೇಳಿಕೆ ನೀಡಿ ಜಮ್ಮು ಮತ್ತು ಕಾಶ್ಮೀರ ಸಂವಿಧಾನ ಸಭೆ ಶಿಫಾರಸು ಮಾಡಿದರೆ ಮಾತ್ರ ಸಂವಿಧಾನ ವಿಧಿ 370ನ್ನು ರದ್ದುಮಾಡಬಹುದು ಎಂದು ನ್ಯಾಯಾಲಯ ಈ ಹಿಂದೆ ಹೇಳಿತ್ತು ಎಂದು ನೆನಪಿಸಿಕೊಂಡಿದ್ದರು. ಸುಪ್ರೀಂ ಕೋರ್ಟ್ ತೀರ್ಪು ಕೇವಲ 370ನೇ ವಿಧಿಗೆ ಮಾತ್ರ ಸಂಬಂಧಿಸಿದ್ದಲ್ಲ, ಬದಲಿಗೆ ಭಾರತದ ಗುರುತಿನ ಭವಿಷ್ಯವನ್ನು ನಿರ್ಧರಿಸುವ ಪ್ರಮುಖ ಕ್ಷಣ ಎಂದು ಕೂಡ ಮೆಹಬೂಬ ಮುಫ್ತಿ ಹೇಳಿದ್ದರು.
ಇಂದಿನ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಜಮ್ಮು-ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ, ರಾಜಕಾರಣಿಗಳಂತೆ ಇಲ್ಲಿನ ನಿವಾಸಿಗಳೂ ಕೂಡ ಇಂದಿನ ತೀರ್ಪಿನ ಬಗ್ಗೆ ಆತಂಕ, ಕುತೂಹಲದಲ್ಲಿದ್ದಾರೆ ಎಂದರು.’ ಇದು ಡಿ-ಡೇ, ಮಿಲಿಟರಿ ದಾಳಿ ಅಥವಾ ಇತರ ಪ್ರಮುಖ ಘಟನೆ ನಡೆಯಬಹುದಾದ ದಿನವಾಗಿದೆ. ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ನಿವೃತ್ತ ಶಿಕ್ಷಕ ಅಬ್ದುಲ್ ಗಫಾರ್ ಹೇಳಿದರು. ಉದ್ಯಮಿ ಜಾವೇದ್ ಅಹ್ಮದ್ ಅವರು ನಾಲ್ಕು ವರ್ಷಗಳ ನಂತರ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸುತ್ತಾರೆ ಎಂದು ನಾನು ಭಾವಿಸುವುದಿಲ್ಲ ಎನ್ನುತ್ತಾರೆ. ಈ ಮಧ್ಯೆ, ಪೊಲೀಸರು ಕಣಿವೆ ರಾಜ್ಯದಲ್ಲಿ ತೀವ್ರ ಎಚ್ಚರ ವಹಿಸಿದ್ದಾರೆ. ಸೋಷಿಯಲ್ ಮೀಡಿಯಾ ಪ್ಲಾಟ್ ಫಾರ್ಮ್ ಗಳ ಮೇಲೆ ನಿಗಾ ಇರಿಸಿದ್ದಾರೆ.
ಐವರು ನ್ಯಾಯಾಧೀಶರನ್ನೊಳಗೊಂಡ ಸುಪ್ರೀಂ ಕೋರ್ಟ್ ನ ಸಂವಿಧಾನ ಪೀಠವು 370 ನೇ ವಿಧಿಯ ದುರ್ಬಲಗೊಳಿಸುವಿಕೆಯನ್ನು ಪ್ರಶ್ನಿಸಿ 23 ಅರ್ಜಿಗಳನ್ನು ಆಲಿಸಿದ ನಂತರ ತನ್ನ ತೀರ್ಪನ್ನು ಸೆಪ್ಟೆಂಬರ್ 5 ರಂದು ಕಾಯ್ದಿರಿಸಿತ್ತು. ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಜಮ್ಮು-ಕಾಶ್ಮೀರದ ಸಂವಿಧಾನ ಸಭೆಯ ಶಿಫಾರಸುಗಳ ಆಧಾರದ ಮೇಲೆ ಮಾತ್ರ 370 ನೇ ವಿಧಿಯನ್ನು ರದ್ದುಗೊಳಿಸಬಹುದು ಎಂದು ನ್ಯಾಯಾಲಯವು ಹೇಳಿಕೊಂಡಿದೆ ಎಂದು ಹೇಳಿದರು.