ನವದೆಹಲಿ:
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವಂತ ಬಲದಿಂದ ಗೆಲ್ಲುವ ಸಾಮರ್ಥ್ಯ ಹೊಂದಿದ್ದು, ಯಾವುದೇ ಪಕ್ಷದೊಂದಿಗೆ ಮೈತ್ರಿ ಕುರಿತು ಮಾತುಕತೆ ನಡೆಸಿಲ್ಲ ಎಂದು ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು ಬುಧವಾರ ಹೇಳಿದ್ದಾರೆ.
ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಜೊತೆ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಹೂಡಾ, ಯಾವುದೇ ಪಕ್ಷದೊಂದಿಗೆ ಮೈತ್ರಿ ಕುರಿತು ಮಾತುಕತೆ ನಡೆಸಿಲ್ಲ ಎಂದರು.
“ನಾವು ರಾಷ್ಟ್ರ ಮಟ್ಟದಲ್ಲಿ ಎಎಪಿಯೊಂದಿಗೆ ಮೈತ್ರಿ ಹೊಂದಿದ್ದೇವೆ. ಆದರೆ ಇಲ್ಲಿಯವರೆಗೆ ರಾಜ್ಯ ಮಟ್ಟಕ್ಕೆ ಸಂಬಂಧಿಸಿದಂತೆ ಯಾವುದೇ ಪಕ್ಷದ ಜೊತೆ ಮಾತುಕತೆ ನಡೆಸಿಲ್ಲ. “ಕಾಂಗ್ರೆಸ್ ಸ್ವಂತ ಬಲದ ಮೇಲೆ ಗೆಲ್ಲಲು ಸಮರ್ಥವಾಗಿದೆ. ಯಾವುದೇ ಮಾತುಕತೆ ನಡೆದಿಲ್ಲ” ಎಂದರು. ಇದೇ ವೇಳೆ ಗೆಲ್ಲುವ ಮಾನದಂಡದ ಮೇಲೆ ಕಾಂಗ್ರೆಸ್ ಟಿಕೆಟ್ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಹೇಳಿದ್ದಾರೆ.
ಮಂಗಳವಾರ, ವಿಶೇಷವಾಗಿ ಹರಿಯಾಣದಂತಹ ರಾಜ್ಯಗಳಲ್ಲಿ ಮೈತ್ರಿ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಉಸ್ತುವಾರಿ ಕೆ ಸಿ ವೇಣುಗೋಪಾಲ್ ಅವರನ್ನು ಕೇಳಿದಾಗ, “ನಾವು ಈಗಾಗಲೇ ಮಹಾರಾಷ್ಟ್ರ, ಹರಿಯಾಣ, ಜಾರ್ಖಂಡ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಸಿದ್ಧತೆಗಳ ಬಗ್ಗೆ ಚರ್ಚಿಸಿದ್ದೇವೆ. ಎಲ್ಲೆಲ್ಲಿ ಮೈತ್ರಿಯ ಅಗತ್ಯವಿದೆ ಅಲ್ಲಿ ಸ್ಥಳೀಯ ಘಟಕ ನಿರ್ಧರಿಸುತ್ತಿದೆ ಎಂದು ಹೇಳಿದ್ದರು.