ಬೆಂಗಳೂರು:
ಹುಬ್ಬಳ್ಳಿಯಲ್ಲಿ ಕಳೆದ ವಾರ ನಡೆದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ. ಇಂದು ಸೋಮವಾರ ಬಿಜೆಪಿ ರಾಜ್ಯ ಘಟಕವು ಬೆಂಗಳೂರು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.
ನೇಹಾ ಹತ್ಯೆ ಪ್ರಕರಣದಲ್ಲಿ ‘ಲವ್ ಜಿಹಾದ್’ ಇದೆ ಎಂದು ಬಿಜೆಪಿ ಆರೋಪಿಸುತ್ತಿದೆ. ಬಿಜೆಪಿ ಕೇಂದ್ರ ಸಚಿವರು ಸೇರಿದಂತೆ ಬಿಜೆಪಿ ಎಲ್ಲಾ ನಾಯಕರು ಇದು ಲವ್ ಜಿಹಾದ್ ಪ್ರಕರಣ ಎಂದೂ, ಇದನ್ನು ಅದೇ ದೃಷ್ಟಿಯಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು. ರಾಜ್ಯ ಸರ್ಕಾರ ಈ ವಿಷಯದಲ್ಲಿ ಮೃದು ಧೋರಣೆ ತಳೆದಿದೆ ಎಂದು ಆರೋಪಿಸಿದೆ.
ಹುಬ್ಬಳ್ಳಿಯಲ್ಲಿ ಮುಸ್ಲಿಂ ಸಂಘಟನೆಗಳು ಬಂದ್ ಗೆ ಕರೆ ನೀಡಿ ಪ್ರತಿಭಟನೆಗೆ ತಮ್ಮ ಬೆಂಬಲ ವ್ಯಕ್ತಪಡಿಸಿವೆ. ಹುಬ್ಬಳ್ಳಿಯ ಅಂಜುಮನ್ ಸಂಸ್ಥೆ ನೇಹಾ ಹಿರೇಮಠ ಹತ್ಯೆ ಖಂಡಿಸಿ ಇಂದು ಧಾರವಾಡ ಬಂದ್‌ಗೆ ಕರೆ ನೀಡಿದ್ದಾರೆ. ನೇಹಾ ಹತ್ಯೆ ಖಂಡಿಸಿ ವಾಣಿಜ್ಯ ನಗರಿ ಹುಬ್ಬಳ್ಳಿಯ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೇ ಮುಸ್ಲಿಂ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದೆ. ಹುಬ್ಬಳ್ಳಿಯ ಶಾಹ ಬಜಾರ್ ಮತ್ತು ನೂರಾನಿ ಮಾರ್ಕೆಟ್ ವ್ಯಾಪಾರಸ್ಥರಿಂದ ಬಂದ್‌ಗೆ ಬೆಂಬಲ ನೀಡಲಾಯಿತು.
ಅಂಗಡಿ- ಮುಗ್ಗಟ್ಟುಗಳನ್ನ ಬಂದ್ ಮಾಡಿ ನೇಹಾ ಹತ್ಯೆಯನ್ನು ಖಂಡಿಸಿದ ವ್ಯಾಪಾರಸ್ಥರು, ಬೆಳಗ್ಗೆ 8ರಿಂದ ಮಧ್ಯಾಹ್ನ 3ಗಂಟೆಯವರೆಗೆ ಅಂಗಡಿಗಳು ಬಂದ್ ಆಗಿರಲಿದ್ದು, ಜಸ್ಟಿಸ್ ಟು ನೇಹಾ ಹಿರೇಮಠ ಎಂದು ತಮ್ಮ ಅಂಗಡಿಗಳಿಗೆ ಬೋರ್ಡ್‌ಗಳನ್ನು ಹಾಕಿ ಬಂದ್‌ಗೆ ಬೆಂಬಲ ನೀಡಿದ್ದಾರೆ. ಹಂತಕ ಫಯಾಜ್‌ನಿಗೆ ಉಗ್ರವಾದ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಬಂದ್‌ಗೆ ಕರೆ ನೀಡಿದ್ದು, ಮಾರುಕಟ್ಟೆಯ ಪ್ರದೇಶಗಳು ಬಿಕೋ ಎನ್ನುತ್ತಿದೆ.