ಬೆಂಗಳೂರು
ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ಪ್ರಲ್ಹಾದ್ ಜೋಶಿ ಕುರಿತು ನೀಡಿದ ಹೇಳಿಕೆಗೆ ಮತ್ತೆ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, ‘ಪೇಶ್ವೆಗಳ ವಂಶಾವಳಿಗೆ ಸಂಬಂಧಪಟ್ಟ ವ್ಯಕ್ತಿಯನ್ನು ಬಿಜೆಪಿ ಮುಂದಿನ ಮುಖ್ಯಮಂತ್ರಿ ಮಾಡಲು ಹುನ್ನಾರ ನಡೆಸಿದೆ ಎಂಬುದು ನನ್ನ ಹೇಳಿಕೆ ಆಗಿತ್ತು. ನನ್ನ ಹೇಳಿಕೆಯಲ್ಲಿ ಗೊಂದಲ ಇಲ್ಲ, ಸ್ಪಷ್ಟತೆ ಇತ್ತು’ ಎಂದಿದ್ದಾರೆ.
‘ಕರ್ನಾಟಕ ರಾಜ್ಯದ ಮೇಲೆ, ಅದರಲ್ಲೂ ನಾವೆಲ್ಲರೂ ಶ್ರದ್ಧೆ, ಭಕ್ತಿಯಿಂದ ನಡೆದುಕೊಳ್ಳುವ ಶ್ರೀ ಶೃಂಗೇರಿ ಪೀಠ, ಮತ್ತೂ ಅಲ್ಲಿನ ದೇವಾಲಯಗಳ ಮೇಲೆ ಪೇಶ್ವೆಗಳಿಂದ ಪೈಶಾಚಿಕ ದಾಳಿ ನಡೆದಿತ್ತು. ಇದು ಇತಿಹಾಸ. ಈ ಇತಿಹಾಸವನ್ನು ತಿರುಚಿ ಹೇಳುವ ಅಗತ್ಯ ನನಗಿಲ್ಲ’ ಎಂದೂ ಕುಮಾರಸ್ವಾಮಿ ಹೇಳಿದ್ದಾರೆ.
‘ನಾನು ಹೇಳಿದ್ದೇ ಒಂದು, ಕೆಲವರು ತಿರುಚಿ ಅಪಪ್ರಚಾರ ನಡೆಸುತ್ತಿರುವುದೇ ಇನ್ನೊಂದು. ಈ ಒಂದು ಇನ್ನೊಂದರ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಸತ್ಯಕ್ಕೂ ಸುಳ್ಳಿಗೂ ಇರುವಷ್ಟೇ ದೂರವಿದೆ. ಪಾಪ.. ಕೆಲವರಿಗೆ ತಿರುಚುವುದೇ ಕೆಲಸ, ಅದೇ ಅವರಿಗೆ ಸರ್ವಸ್ವ. ನಾನು ಏನು ಮಾಡಲಿ? ಸತ್ಯ ಹೇಳಿದ್ದೇನೆ, ಚರ್ಚೆಯಾಗಲಿ’ ಎಂದು ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
