ಬೆಂಗಳೂರು:
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಕಟ್ಟಿದ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಯಾವುದೇ ಕೆಲಸ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದು, ಈ ಮೂಲಕ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಗಾಗಿ ಪಟ್ಟು ಹಿಡಿದಿರುವ ಭವಾನಿ ರೇವಣ್ಣ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅನಿತಾ ಕುಮಾರಸ್ವಾಮಿ, ಎಲ್ಲ ಚುಣಾವಣೆಗಳಲ್ಲಿ ನಾನು ಪಕ್ಷದ ಆದೇಶವನ್ನಷ್ಟೇ ಪಾಲಿಸಿ ನಡೆದಿದ್ದೇನೆ. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಕಟ್ಟಿದ ಜೆಡಿಎಸ್‌ಗೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯನ್ನುಂಟು ಮಾಡುವ ಕೆಲಸ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ ಎಂದು ತಿಳಿಸಿದ್ದಾರೆ.
ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ, ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.