ಬೆಂಗಳೂರು:
ರಾಜ್ಯ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಸಿದ್ದರಾಮಯ್ಯ ಅವರು ಯಾವುದೇ ಸುಳಿವುಗಳನ್ನು ಬಿಟ್ಟುಕೊಟ್ಟಿಲ್ಲ.ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಸೋಮವಾರ ದೆಹಲಿಗೆ ಬರುವಂತೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿತ್ತು.
ಭಾನುವಾರ ರಾತ್ರಿ ಬೆಂಗಳೂರಿಗೆ ಬಂದಿದ್ದ ಎಐಸಿಸಿ ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿ ದೆಹಲಿಗೆ ಸೋಮವಾರ ಬೆಳಗ್ಗೆ ತೆರಳಿದ್ದರು. ನಂತರ ಶಾಸಕರ ಅಭಿಪ್ರಾಯವನ್ನು ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಲುಪಿಸಿದ್ದರು.
ದೆಹಲಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಹೈಕಮಾಂಡ್ ನಿರ್ಧಾರದ ಬಗ್ಗೆ ನನಗೆ ತಿಳಿದಿಲ್ಲ. ಕರ್ನಾಟಕದಲ್ಲಿ ಯಾವ ಯಾವ ಬದಲಾವಣೆ ಆಗುತ್ತಿದೆ ಎಂಬುದು ಎಲ್ಲರಿಗೆ ತಿಳಿದಿದೆ. ಹೈಕಮಾಂಡ್ ಭೇಟಿಯ ಬಳಿಕ ನನ್ನ ಅಭಿಪ್ರಾಯ ತಿಳಿಸುತ್ತೇನೆಂದು ಹೇಳಿದರು.