ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿದ್ದು, ಹೊಸ ವರ್ಷಾಚರಣೆ ಸಂಭ್ರಮಕ್ಕೆ ಸಂಪೂರ್ಣ ಕಡಿವಾಣ ಬೀಳುವ ಸಾಧ್ಯತೆ ದಟ್ಟವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಟಫ್ ರೂಲ್ಸ್ ಜಾರಿ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಮುನ್ಸೂಚನೆ ನೀಡಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ, ದೇಶಾದ್ಯಂತ ಒಮಿಕ್ರಾನ್ ಸೋಂಕು ಹೆಚ್ಚುತ್ತಿದೆ. ಈ ನಡುವೆ ಕೊರೊನಾ ಆತಂಕ ಕೂಡ ಮನೆ ಮಾಡಿದೆ. ಇಂತಹ ಸಂದರ್ಭದಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ನೀಡಲು ಸಾಧ್ಯವೇ ಇಲ್ಲ. ಈಗಾಗಲೇ ಕೆಲ ನಿರ್ಬಂಧಗಳನ್ನು ವಿಧಿಸಲಾಗಿದೆ. ಇನ್ನಷ್ಟು ಖಡಕ್ ರೂಲ್ಸ್ ಬಗ್ಗೆ ನಾಳೆ ನಿರ್ಧರಿಸಲಾಗುವುದು ಎಂದರು.
ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಮಾತ್ರ ಆತಂಕ ಮನೆ ಮಾಡಿತ್ತು. ಆದರೀಗ ತಮಿಳುನಾಡಿನಲ್ಲಿಯೂ ಒಮಿಕ್ರಾನ್ ಪ್ರಕರಣ ಹೆಚ್ಚುತ್ತಿದೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅಗತ್ಯವಿದೆ. ಈಗಾಗಲೇ ಬಾರ್, ಪಬ್, ರೆಸ್ಟೋರೆಂಟ್ ಗಳಲ್ಲಿ ಶೇ.50ರಷ್ಟು ಅವಕಾಶ ನೀಡಲಾಗಿದೆ. ಆದರೆ ದೇಶದಲ್ಲಿ ಒಮಿಕ್ರಾನ್ ಹೆಚ್ಚುತ್ತಿರುವುದರಿಂದ ಕೇಂದ್ರ ಸರ್ಕಾರದಿಂದ ಹೊಸ ಗೈಡ್ ಲೈನ್ ಕೂಡ ಬಂದಿದೆ. ಈ ನಿಟ್ಟಿನಲ್ಲಿ ಗೈಡ್ ಲೈನ್ ಗೆ ಅನುಗುಣವಾಗಿ ರಾಜ್ಯದಲ್ಲಿ ಕೆಲ ಮಾರ್ಗಸೂಚಿ ತರಲಾಗುತ್ತದೆ ಎಂದು ಹೇಳಿದರು.
ಇನ್ನು ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರ ಸಭೆ ನಡೆಯಲಿದ್ದು, ಸಭೆಯಲ್ಲಿ ನೈಟ್ ಕರ್ಫ್ಯೂ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ