ಬೆಂಗಳೂರು:
ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಾದ್ಯಂತ ಕನಿಷ್ಠ 600 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಘೋಷಿಸಿದ್ದಾರೆ.
ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ”ಇಂದಿರಾ ಕ್ಯಾಂಟೀನ್‌ನಲ್ಲಿ ಎಲ್ಲರಿಗೂ 5 ರೂ.ಗೆ ಬೆಳಗಿನ ಉಪಾಹಾರ ಮತ್ತು 10 ರೂ.ಗೆ ಊಟ ನೀಡಲಾಗುವುದು ಎಂದರು.
“ನಾವು ಬೆಂಗಳೂರಿನಲ್ಲಿ ಒಟ್ಟು 188 ಹೊಸ ಇಂದಿರಾ ಕ್ಯಾಂಟೀನ್‌ಗಳನ್ನು ಪ್ರಾರಂಭಿಸುತ್ತಿದ್ದೇವೆ. ವಿಮಾನ ನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆ ಇತ್ತು. ಹೀಗಾಗಿ ಇಲ್ಲಿ ಎರಡು ಕ್ಯಾಂಟೀನ್ ಆರಂಭಿಸಲಾಗುತ್ತಿದೆ. ಬೆಂಗಳೂರಿನಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್ ಗಳ ಪೈಕಿ ಈಗಾಗಲೇ 40 ಪೂರ್ಣಗೊಂಡಿದ್ದು, ಉಳಿದವು ಪ್ರಗತಿಯಲ್ಲಿವೆ ಎಂದು ಸಿಎಂ ತಿಳಿಸಿದರು.
ಬೆಂಗಳೂರಿನ ಪ್ರತಿ ವಾರ್ಡ್‌ಗಳಲ್ಲಿ ಹಾಗೂ ರಾಜ್ಯದ ಇತರ ಭಾಗಗಳಲ್ಲಿಯೂ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುವುದು. ಹಿಂದಿನ ಸರ್ಕಾರ ಊಟ ನೀಡದೆ ಕೆಲವನ್ನು ಮುಚ್ಚಲಾಗಿದೆ. ಬಡವರು ಹೊಟ್ಟೆ ತುಂಬ ಊಟ ಮಾಡಬೇಕು ಎಂಬ ಕಾರಣಕ್ಕೆ ನಾವು ಈ ಕಾರ್ಯಕ್ರಮವನ್ನು ಪುನರಾರಂಭಿಸಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದರು.