ನವದೆಹಲಿ:
ದೆಹಲಿ ಅಬಕಾರಿ ನೀತಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು (Interim Bail) ಮಂಜೂರು ಮಾಡಿದೆ.
ಜಾರಿ ನಿರ್ದೇಶನಾಲಯದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದ್ದು, ಇ.ಡಿ ತನ್ನ ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.
ಆದಾಗ್ಯೂ ಕೇಜ್ರಿವಾಲ್ ಅವರು ಅಬಕಾರಿ ನೀತಿ ವಿಷಯದಲ್ಲಿ ಸಿಬಿಐ ಪ್ರಕರಣದಲ್ಲಿ ಪ್ರಸ್ತುತ ಬಂಧನದಲ್ಲಿರುವುದರಿಂದ ಅವರು ಜೈಲಿನಲ್ಲಿಯೇ ಇರಲಿದ್ದಾರೆ.
ಇದರ ಜೊತೆಗೆ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವಾಗ, ಬಂಧನದ ಕಾರಣಕ್ಕೆ ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯವು ಹೇಳಿದ್ದು, ಅವರು (ಕೇಜ್ರಿವಾಲ್) ಚುನಾಯಿತ ನಾಯಕ, ಹೀಗಾಗಿ ಇಂತಹ ಪರಿಸ್ಥಿತಿಯಲ್ಲಿ ಕೇಜ್ರಿವಾಲ್ ಅವರೇ ತಾನು ಸಿಎಂ ಆಗಿ ಉಳಿಯಬೇಕೋ ಬೇಡವೋ ಎಂಬುದನ್ನು ನಿರ್ಧರಿಸಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮದ್ಯ ಮಾರಾಟ ನೀತಿ ಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಕೇಜ್ರಿವಾಲ್ ಅವರನ್ನು ಹಣಕಾಸು ಅಪರಾಧ ನಿಗ್ರಹ ಸಂಸ್ಥೆ ಮಾರ್ಚ್‌ನಲ್ಲಿ ಬಂಧಿಸಿತ್ತು. ವಿಚಾರಣಾ ನ್ಯಾಯಾಲಯವು ಜೂನ್ 20 ರಂದು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಕೇಜ್ರಿವಾಲ್‌ಗೆ ಜಾಮೀನು ನೀಡಿತ್ತು, ಆದರೆ ದೆಹಲಿ ಹೈಕೋರ್ಟ್ ನಂತರ ಆದೇಶವನ್ನು ತಡೆಹಿಡಿದಿತ್ತು. ಇಡಿ ಸಲ್ಲಿಸಿದ್ದ ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್, ಸಿಎಂ ಕೇಜ್ರಿವಾಲ್ 90 ದಿನಗಳಿಗಿಂತ ಹೆಚ್ಚು ಜೈಲಿನಲ್ಲಿ ಕಳೆದಿದ್ದಾರೆ ಎಂದು ಹೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ