ಇಸ್ಲಾಮಾಬಾದ್:
ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ನವಾಜ್ ಷರೀಫ್ ಅವರಿಗೆ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಜಾಮೀನು ನೀಡಿ ಆದೇಶ ಹೊರಡಿಸಿದೆ.ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಷರೀಫ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಕಾರಣದಿಂದ ಅವರಿಗೆ ಚಿಕಿತ್ಸೆ ಅಗತ್ಯವಿರುವ ಕಾರಣದಿಂದ ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ .
ನವಾಜ್ ಷರೀಫ್ ಅವರು ಅಲ್-ಅಝಿಝಿಯಾ ಸ್ಟೀಲ್ ಮಿಲ್ಸ್ ಭ್ರಷ್ಟಾಚಾರ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದರು ಮತ್ತು ಕಳೆದ ವರ್ಷದ ಡಿಸೆಂಬರ್ ನಿಂದ ಜೈಲಿನಲ್ಲಿದ್ದಾರೆ.ಜೈಲಿನಲ್ಲಿರುವ ಅವರು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಸ್ಲಾಮಾಬಾದ್ ಹೈಕೋರ್ಟ್ ಫೆಬ್ರವರಿ 25ರಂದು ವಜಾಗೊಳಿಸಿತ್ತು.
ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದ ಅವರ ಅರ್ಜಿ ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್, ವೈದ್ಯಕೀಯ ಚಿಕಿತ್ಸೆಗಾಗಿ ಆರು ವಾರಗಳ ಕಾಲ ನವಾಜ್ ಷರೀಫ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ಆದರೆ ದೇಶಬಿಟ್ಟು ಹೊರ ಹೋಗುವಂತಿಲ್ಲ ಎಂದು ಷರತ್ತು ವಿಧಿಸಿದೆ.
ಅವೆನ್ಫೀಲ್ಡ್ ಪ್ರಾಪರ್ಟಿಸ್, ಫ್ಲಾಗ್ಶಿಪ್ ಇನ್ವೆಸ್ಟ್ಮೆಂಟ್ ಹಾಗೂ ಅಲ್-ಅಝಿಝಿಯಾ ಈ ಮೂರು ಭ್ರಷ್ಟಾಚಾರ ಪ್ರಕರಣಗಳ ಜೊತೆಯಲ್ಲಿ 2017ರ ಜುಲೈನಲ್ಲಿ ಪನಾಮ ಪೇಪರ್ಸ್ ಹಗರಣದಲ್ಲಿ ಸುಪ್ರೀಂಕೋರ್ಟ್ ನವಾಜ್ ಷರೀಫ್ ಅವರನ್ನು ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಳಿಸಿ ಜೈಲುವಾಸಕ್ಕೆ ಕಳುಹಿಸಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








