ಬೆಂಗಳೂರು:
ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಮಾಸ್ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್ ಕರ್ನಾಟಕ ಡಿಜಿಪಿ ಅಲೋಕ್ ಮೋಹನ್ ಅವರಿಗೆ ದೂರು ನೀಡಿದೆ.
ಮಾಜಿ ಎಂಎಲ್‌ಸಿ ಮತ್ತು ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಎಚ್‌ಎಂ ರಮೇಶ್ ಗೌಡ ಅವರು ಗಾಂಧಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 202ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಕೋರಿದ್ದಾರೆ. ಮೇ 2ರಂದು ಶಿವಮೊಗ್ಗ ಮತ್ತು ರಾಯಚೂರು ಜಿಲ್ಲಾ ಕೇಂದ್ರಗಳಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದರು.
ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ್ದಾರೆ. ಇದು ಲೈಂಗಿಕ ಹಗರಣವಲ್ಲ ಮಾಸ್ ರೇಪ್ ಎಂದು ರಾಹುಲ್ ಗಾಂಧಿ ಕರ್ನಾಟಕ ಜನತೆ ಮುಂದೆ ಹೇಳಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ ಇದೇ ಮಾಹಿತಿಯನ್ನು ಮಾಧ್ಯಮಗಳ ಮುಂದೆಯೂ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ರಾಹುಲ್ ಗಾಂಧಿಗೆ ಎಸ್‌ಐಟಿ ಸಮನ್ಸ್ ಜಾರಿ ಮಾಡಬೇಕು ಎಂದು ಜೆಡಿಎಸ್ ಒತ್ತಾಯಿಸಿದೆ.
ಪ್ರಜ್ವಲ್ 400 ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಗಾಂಧಿ ನಿರ್ದಿಷ್ಟ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ, ಅತ್ಯಾಚಾರಕ್ಕೊಳಗಾದ 400 ಮಹಿಳೆಯರ ಮಾಹಿತಿ ಮತ್ತು ವಿವರಗಳು ಅವರಿಗೆ ಗೊತ್ತಿದ್ದೇಯೆ ಅಥವಾ ಉದ್ದೇಶಪೂರ್ವಕವಾಗಿ ವಿವರಗಳನ್ನು ಬಹಿರಂಗಪಡಿಸಲು ವಿಫಲರಾಗಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.