ಬೆಂಗಳೂರು:
ಮೇ 10 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ನಟ ಕಿಚ್ಚ ಸುದೀಪ್ ಘೋಷಿಸಿದ ಬೆನ್ನಲ್ಲೇ, ಜೆಡಿಎಸ್ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ನಟನನ್ನು ಒಳಗೊಂಡ ಚಲನಚಿತ್ರಗಳು, ಜಾಹೀರಾತುಗಳು ಮತ್ತು ಇತರ ಕಾರ್ಯಕ್ರಮಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿದೆ.
ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸುದೀಪ್ ಅವರ ಸಿನಿಮಾ, ಜಾಹೀರಾತು, ಟಿವಿ ಕಾರ್ಯಕ್ರಮಗಳ ಪ್ರಸಾರವನ್ನು ನಿಷೇಧಿಸಬೇಕು ಎಂದು ಜೆಡಿಎಸ್ ರಾಜ್ಯ ಕಾನೂನು ಘಟಕದ ವಕ್ತಾರ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಗುರುವಾರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ.
ನಟನ ಚಲನಚಿತ್ರಗಳು ಅಥವಾ ಕಾರ್ಯಕ್ರಮಗಳ ಪ್ರಸಾರವು ಮತದಾರರ ಮೇಲೆ ಪ್ರಭಾವ ಬೀರಬಹುದು. ಆದ್ದರಿಂದ ಅವುಗಳನ್ನು ನಿಷೇಧಿಸಲು ಆದೇಶವನ್ನು ಹೊರಡಿಸಬೇಕು. ಸಾರ್ವಜನಿಕ ಸ್ಥಳಗಳಿಂದ ನಟನ ಫೋಟೊ ಇರುವ ಪೋಸ್ಟರ್‌ಗಳನ್ನು ತೆಗೆಯುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸಿಇಸಿಗೆ ಮನವಿ ಮಾಡಿದರು.
ಬೊಮ್ಮಾಯಿ ಅವರೊಂದಿಗೆ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುದೀಪ್, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಘೋಷಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ