ಹಾವೇರಿ/ ಚಿತ್ರದುರ್ಗ:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಕ್ಷೇತ್ರವಾಗಿರುವ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕು ಬಂಕಾಪುರ ಪುರಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಕಾಂಗ್ರೆಸ್ ತೆಕ್ಕೆಗೆ ಬಂಕಾಪುರ ಪುರಸಭೆ ಒಲಿದಿದೆ.
ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪುರಸಭೆ, ಹಾವೇರಿ ತಾಲೂಕಿನ ಗುತ್ತಲ ಪಪಂ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿಗೆ ಹಿನ್ನಡೆಯಾಗಿದ್ದು, ಎರಡೂ ಕಡೆಗಳಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ.
ಗುತ್ತಲ ಪಪಂನ ಒಟ್ಟು 18 ಸ್ಥಾನಗಳಲ್ಲಿ 11 ರಲ್ಲಿ ಗೆದ್ದಿರುವ ಕಾಂಗ್ರೆಸ್ ಬಹುಮತ ಪಡೆದಿದೆ. ಬಿಜೆಪಿ ಕೇವಲ 6 ಸ್ಥಾನ ಗಳಿಸಿದೆ.1 ಕಡೆ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಒಟ್ಟು 23 ವಾರ್ಡ್ ಗಳಲ್ಲಿ ಕಾಂಗ್ರೆಸ್ 14 ಸ್ಥಾನ ಗಳಿಸಿ ಅಧಿಕಾರದ ಗದ್ದುಗೆಗೇರಿದೆ. ಬಿಜೆಪಿ 7 ಕಡೆ ಹಾಗೂ 2 ಕಡೆಗಳಲ್ಲಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ.
ಹಾನಗಲ್ ಪುರಸಭೆಯ 19 ನೇ ವಾರ್ಡ್ ಗೆ ನಡೆದಿದ್ದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಜಮೀರ್ ಅಹ್ಮದ್ ಶೇಖ್ ಗೆಲುವು ಸಾಧಿಸಿದ್ದಾರೆ.ಈ ಮೂಲಕ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಬಿಜೆಪಿಯ ನಾಯಕರಿಗೆ ಮುಖಭಂಗವನ್ನುಂಟು ಮಾಡಿದೆ.
ಅದೇ ಇನ್ನೊಂದೆಡೆ, ಸಾರಿಗೆ ಹಾಗೂ ಪರಿಶಿಷ್ಟ ವರ್ಷಗಳ ಸಚಿವ ಶ್ರೀರಾಮುಲು ಪ್ರತಿನಿಧಿಸುವ ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಪಟ್ಟಣ ಪಂಚಾಯತಿ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಹೀನಾಯ ಸೋಲು ಕಂಡಿದೆ.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಸ್ಪಷ್ಟ ಬಹುಮತ ಪಡೆದಿದೆ.
ಸಚಿವ ಶ್ರೀರಾಮುಲು ಸ್ವತಃ ಪ್ರಚಾರ ಕೈಗೊಂಡಿದ್ದರೂ ಬಿಜೆಪಿಗೆ ಸೋಲು ಅನುಭವಿಸಿದೆ. ಒಟ್ಟು 16 ಸ್ಥಾನಗಳಲ್ಲಿ ಕಾಂಗ್ರೆಸ್ 11, ಬಿಜೆಪಿ 2, ಪಕ್ಷೇತರ 3 ಅಭ್ಯರ್ಥಿಗಳು ಜಯ ಸಾಧಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
