ನವದೆಹಲಿ :
ಕೇಂದ್ರದಿಂದ ಮೇಕೆದಾಟು ಯೋಜನೆಗೆ ಸಕರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಕೇಂದ್ರ ಜಲಸಂಪನ್ಮೂಲ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳಿಗೆ ಮೇಕೆದಾಟು ಯೋಜನೆ ಬಗ್ಗೆ ಸೂಚನೆ ನೀಡಿದ್ದಾರೆ.
ಇರತಕ್ಕಂತಹ ವಾಸ್ತವ ಅಂಶಗಳನ್ನು ನಾವು ಗಮನಕ್ಕೆ ತಂದಿದ್ದು ಕೇಂದ್ರ ಸಚಿವರು ಸಹಮತ ವ್ಯಕ್ತಪಡಿಸಿದ್ದಾರೆ ಮತ್ತು ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ ಎಂದರು. ಈ ಬಾರಿ 200 ಟಿಎಂಸಿ ನೀರು ಸಮುದ್ರಕ್ಕೆ ವ್ಯರ್ಥವಾಗಿ ಹರಿದಿದೆ. ಈ ನೀರನ್ನು ಸಂಗ್ರಹಿಸಿಟ್ಟುಕೊಂಡರೆ, ಬರಗಾಲದ ಸಂದರ್ಭದಲ್ಲಿ ಬಳಕೆಗೆ ಅನುಕೂಲವಾಗುತ್ತದೆ ಎಂದು ಅವರ ಗಮನಕ್ಕೆ ತಂದಿದ್ದು, ಅವರೂ ಸಹ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.
ತಮಿಳುನಾಡಿಗೆ ಹರಿದು ಹೋಗಿ ವ್ಯರ್ಥವಾಗುವ ಕಾವೇರಿ ನೀರನ್ನು ಬಳಸಿಕೊಳ್ಳುವ ಮೇಕೆದಾಟು ಯೋಜನೆಯ ಮೂಲಕ ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಯೋಚನೆ ಸರ್ಕಾರದ್ದಾಗಿದೆ.
ಇನ್ನು ಮೇಕೆದಾಟು ಯೋಜನೆಗೆ ಕಾನೂನಾತ್ಮಕ ಒಪ್ಪಿಗೆ ಪಡೆಯುವ ವಿಶ್ವಾಸವಿದೆ. ನಮ್ಮ ಅಧಿಕಾರಿಗಳ ಜೊತೆ ಮಾತನಾಡಿ ಬಾಕಿ ಇರುವ ಕೆಲಸವನ್ನು ನೋಡಿಕೊಳ್ಳುತ್ತೇವೆ. ನಾವು ಅರಣ್ಯ ಮತ್ತು ಪರಿಸರ ಇಲಾಖೆಯ ಪರವಾನಿಗೆಯನ್ನೂ ಸಹ ಪಡೆಯಬೇಕಾಗಿದೆ ಎಂದರು.
ಗುರುವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಸಚಿವ ಎಚ್.ಡಿ.ರೇವಣ್ಣ ಅವರು ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ