ಐಎಎಸ್ ಮಾಜಿ ಅಧಿಕಾರಿ ಸಸಿಕಾಂತ್ ಸೇಂಥಿಲ್ ಕಾಂಗ್ರೆಸ್ ಸೇರ್ಪಡೆ!!

ಬೆಂಗಳೂರು : 

      ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಸೋಮವಾರ ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮಿಳುನಾಡಿನ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದಾರೆ.

      ಇತ್ತೀಚೆಗಷ್ಟೇ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಇದೀಗ ಮತ್ತೋರ್ವ ಅಧಿಕಾರಿ ರಾಜಕೀಯ ಪ್ರವೇಶಿಸಿದ್ದಾರೆ. 

      2009ರ ಕರ್ನಾಟಕದ ಕೇಡರ್‌ನ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಕಳೆದ ವರ್ಷದ ಸೆಪ್ಟಂಬರ್ 6 ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜೀನಾಮೇ ಬಳಿಕ ಸಿಂಥೆಲ್ ಅವರು ಎನ್ ಆರ್ ಸಿ ಮತ್ತು ಸಿಎಎ ವಿರೋಧಿ ಪ್ರತಿಭಟನೆಗಳಲ್ಲಿ ಭಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಅಲ್ಲದೇ ವಿಚಾರ ಸಂಕೀರಣ, ಸಮಾರಂಭಗಳಲ್ಲಿ ಸಸಿಕಾಂತ್ ಸಿಂಥೆಲ್ ಭಾಗವಹಿಸಿದ್ದರು.

     ಐಎಎಸ್ ಅಧಿಕಾರಿಯಾಗಿದ್ದುಕೊಂಡು ಸರ್ಕಾರದ ನಡೆಗಳ ವಿರುದ್ಧ ಹೋರಾಡಲು ಸಾಧ್ಯವಿಲ್ಲ ಎಂಬ ಕಾರಣದಿಂದಾಗಿ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದ ಸಸಿಕಾಂತ್ ಸೆಂಥಿಲ್ ‘ಹೋರಾಟವನ್ನು ಮುಂದುವರೆಸುವ ದೃಷ್ಟಿಯಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದೇನೆ’ ಎಂದು ಟ್ವೀಟ್ ಮೂಲಕ‌ ತಿಳಿಸಿದ್ದಾರೆ.

     ಇನ್ನು 2021ರಲ್ಲಿ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ