ನವದೆಹಲಿ:
ದೇಶದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರ ಸುರಕ್ಷತೆ ಮತ್ತು ಭದ್ರತೆಗೆ ಕ್ರಮ ಕೈಗೊಳ್ಳಬೇಕು ಎಂದು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಪಿಐಎಲ್ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
ಮಂಗಳವಾರ ಜೂನ್ 18 ಅರ್ಜಿ ವಿಚಾರಣೆಗೆ ಬರಲಿದೆ. ಅರ್ಜಿಯ ತುರ್ತು ವಿಚಾರಣೆ ನಡೆಸಬೇಕು ಎಂದು ಅರ್ಜಿದಾರರ ಪರ ವಕೀಲ ಅಲಕ್ ಅಲೋಕ್ ಶ್ರೀವಾಸ್ತವ ಅವರು ಮಾಡಿದ ಮನವಿಯನ್ನು ನ್ಯಾಯಮೂರ್ತಿ ದೀಪಕ್ ಗುಪ್ತಾ ಮತ್ತು ಸೂರ್ಯಕಾಂತ್ ಅವರಿದ್ದ ವಿಶೇಷ ಪೀಠ ಪುರಸ್ಕರಿಸಿದೆ.
ಚಿಕಿತ್ಸೆ ಫಲಕಾರಿಯಾಗದೆ ಕೋಲ್ಕತ್ತದ ಆಸ್ಪತ್ರೆಯೊಂದರಲ್ಲಿ ಜೂನ್ 11ರಂದು 70 ವರ್ಷ ವಯಸ್ಸಿನ ರೋಗಿಯೊಬ್ಬರು ಮೃತಪಟ್ಟಿದ್ದರು. ಸಾವಿಗೆ ವೈದ್ಯರ ನಿರ್ಲಕ್ಷ್ಯ ಆರೋಪ ಹೊರಿಸಿ ಮೃತರ ಕುಟುಂಬದವರು ಇಬ್ಬರು ಕಿರಿಯ ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದರ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ವೈದ್ಯರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಕುರಿತು ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿದೆ. ಪ್ರತಿಭಟನೆಯಿಂದಾಗಿ ದೇಶದಲ್ಲಿ ಆರೋಗ್ಯ ಸೇವೆ ವ್ಯತ್ಯಯವಾಗಿದೆ. ವೈದ್ಯರ ಸೇವೆ ಲಭ್ಯವಾಗದೆ ಅನೇಕರು ಮೃತಪಡುತ್ತಿದ್ದಾರೆ ಎಂದು ಪಿಐಎಲ್‌ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಭದ್ರತಾ ಸಿಬ್ಬಂದಿ ನಿಯೋಜಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಇಲಾಖೆ, ಆರೋಗ್ಯ ಇಲಾಖೆ ಮತ್ತು ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ