ನವದೆಹಲಿ :
ಅಯೋಧ್ಯೆ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಮರುಪರಿಶೀಲನೆ ನಡೆಸುವಂತೆ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಗಳು ತಿರಸ್ಕೃತಗೊಂಡಿದೆ.
ನವೆಂಬರ್ 9 ರಂದು ಹಿಂದಿನ ಸಿಜೆಐ ರಂಜನ್ ಗೊಗೋಯ್ ನೇತೃತ್ವದ ಪಂಚ ಸದಸ್ಯರ ಪೀಠ ಅಯೋಧ್ಯೆ ಭೂವಿವಾದಕ್ಕೆ ಸಂಬಂಧಪಟ್ಟಂತೆ ಐತಿಹಾಸಿಕ ತೀರ್ಪು ನೀಡಿತ್ತು. ಅಯೋಧ್ಯೆ ವಿವಾದಿತ ಸ್ಥಳದಲ್ಲಿ ಹಿಂದುಗಳು ರಾಮಮಂದಿರ ನಿರ್ಮಿಸಲಿ. ಮುಸ್ಲಿಮರಿಗೆ ಮಸೀದಿ ನಿರ್ಮಾಣಕ್ಕೆ ಬೇರೆ ಪ್ರದೇಶದಲ್ಲಿ ಐದು ಎಕರೆ ಜಾಗ ನೀಡಬೇಕು ಎಂದು ತೀರ್ಪು ನೀಡಿತ್ತು.
ಈ ತೀರ್ಪು ಪ್ರಶ್ನಿಸಿ 18 ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಸುಪ್ರೀಂಕೋರ್ಟ್ ನ ಪಂಚಪೀಠದಲ್ಲಿ ಈ ಅರ್ಜಿಗಳ ವಿಚಾರಣೆ ನಡೆದಿದ್ದು, ನ್ಯಾಯಾಧೀಶರು ಎಲ್ಲ ಅರ್ಜಿಗಳನ್ನು ವಜಾಗೊಳಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ , ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಸ್.ಎ.ನಜೀರ್, ಡಿ.ವೈ.ಚಂದ್ರಚೂಡ್ ಹಾಗೂ ಸಂಜೀವ್ ಖನ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಮಹತ್ವದ ತೀರ್ಮಾನ ಕೈಗೊಂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ