ನವದೆಹಲಿ:
ಐಎನ್ ಎಕ್ಸ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರಿಗೆ ಸೇರಿದ ರೂ. 11.04 ಕೋಟಿ ಮೊತ್ತದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮಂಗಳವಾರ ವಶಕ್ಕೆ ಪಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಶಕ್ಕೆ ಪಡೆದಿರುವ ನಾಲ್ಕು ಆಸ್ತಿಗಳ ಪೈಕಿ ಒಂದು ಸ್ಥಿರಾಸ್ತಿ ಕರ್ನಾಟಕದ ಕೊಡಗು ಜಿಲ್ಲೆಯಲ್ಲಿದೆ. ಕಾರ್ತಿ ವಿರುದ್ಧ ಹಣ ವರ್ಗಾವಣೆ ತಡೆ ಕಾಯ್ದೆಯಡಿ ತಾತ್ಕಾಲಿಕ ಆದೇಶವನ್ನು ಹೊರಡಿಸಲಾಗಿದೆ ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ.
ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರು ತಮಿಳುನಾಡಿನ ಶಿವಗಂಗಾ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿದ್ದು, ಐಎನ್‌ಎಕ್ಸ್ ಪ್ರಕರಣದಲ್ಲಿ ಸಿಬಿಐ ಮತ್ತು ಇಡಿಯಿಂದ ಬಂಧಿಸಲ್ಪಟ್ಟಿದ್ದಾರೆ.
ಚಿದಂಬರಂ ಯುಪಿಎ ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿಗೆ ಅನುಮೋದನೆಗೆ ಸಂಬಂಧಿಸಿದಂತೆ ಐಎನ್‌ಎಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನಿಂದ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.