ನವದೆಹಲಿ:
ಈಗ ರದ್ದಾಗಿರುವ ದೆಹಲಿ ಸರ್ಕಾರದ 2021–22ರ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಕೋರಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗುರುವಾರ ದೆಹಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಪ್ರಕರಣದ ವಿಚಾರಣೆಯನ್ನು ದಿನದ ನಂತರ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಅನುವು ಮಾಡಿಕೊಡಲು ಸುಪ್ರೀಂ ಕೋರ್ಟ್ ಮೇ 10 ರಂದು 21 ದಿನಗಳ ಮಧ್ಯಂತರ ಜಾಮೀನು ನೀಡಿತ್ತು.
ಏಳು ಹಂತದ ಚುನಾವಣೆಯ ಕೊನೆಯ ಹಂತದ ಮತದಾನ ಮುಗಿದ ಒಂದು ದಿನದ ನಂತರ ಜೂನ್ 2 ರಂದು ಕೇಜ್ರಿವಾಲ್ ಅವರು ಜೈಲು ಅಧಿಕಾರಿಗಳ ಮುಂದೆ ಶರಣಾಗಬೇಕು ಎಂದು ಕೋರ್ಟ್ ನಿರ್ದೇಶಿಸಿತ್ತು.
ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಲು ಪ್ರಕರಣದಲ್ಲಿ ಮಧ್ಯಂತರ ಜಾಮೀನನ್ನು ಇನ್ನೂ ಏಳು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
ವೈದ್ಯಕೀಯ ಕಾರಣಕ್ಕೆ ಏಳು ದಿನಗಳವರೆಗೆ ಮಧ್ಯಂತರ ಜಾಮೀನಿನ ಅವಧಿಯನ್ನು ವಿಸ್ತರಿಸಬೇಕು ಎಂದು ಕೋರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ತುರ್ತು ವಿಚಾರಣೆಗೆ ನಿಗದಿ ಮಾಡಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಿ ಬುಧವಾರ ನಿರಾಕರಿಸಿದೆ.
ರೆಗ್ಯುಲರ್ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯದ ಮೊರೆ ಹೋಗಲು ಕೇಜ್ರಿವಾಲ್ ಅವರಿಗೆ ಅನುಮತಿ ನೀಡಲಾಗಿರುವ ಕಾರಣಕ್ಕೆ ಈ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಎತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ರಿಜಿಸ್ಟ್ರಿ ಹೇಳಿದೆ.