ಕೊರಟಗೆರೆ :
ಕೊರೋನಾ ತೀವ್ರತೆಯ ಹಿನ್ನೆಲೆಯಲ್ಲಿ ವ್ಯಕ್ತಯೊರ್ವ ಕೊವ್ಯಾಕ್ಸಿನ್ ಲಸಿಕೆ ಪಡೆದ ಎರಡೇ ಗಂಟೆಯಲ್ಲಿ ಕೊನೆಯುಸಿರೆಳೆದ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಕೊರಟಗೆರೆ ತಾಲ್ಲೂಕಿನ ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಟ್ಲ ಗೊಲ್ಲಹಳ್ಳಿ ಲಕ್ಷ್ಮಯ್ಯ ಸಾವಿಗೀಡಾದ ದುರ್ದೈವಿ ಯಾಗಿದ್ದಾರೆ. ಮೃತ ಲಕ್ಷ್ಮಯ್ಯ ಬುಕ್ಕಾಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕೋರೋನಾ ಲಸಿಕೆ ಕೊವ್ಯಾಕ್ಸಿನ್ ಪಡೆದ ಕೇವಲ ಎರಡು ಗಂಟೆಯಲ್ಲಿಯೇ ಸಾವಿಗೀಡಾಗಿರುವುದು ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದೆ.
ಕೊರೋನಾ 2ನೇ ಅಲೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹೆಚ್ಚು ಹೆಚ್ಚು ಕೊರೋನಾ ಲಸಿಕೆ ಪಡೆಯಲು ಮುಂದಾಗುತ್ತಿರುವ ಸಂದರ್ಭದಲ್ಲಿ ಲಸಿಕೆ ಪಡೆದ ಕೆಲವೇ ಗಂಟೆಗಳಲ್ಲಿ ಸಾವಿಗೀಡಾಗಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಜೊತೆಗೆ ಸಾರ್ವಜನಿಕರು ವ್ಯಾಕ್ಸಿನ್ ಪಡೆಯಲು ಮೀನಾಮೇಷ ಎಣಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಕಾಳ್ಗಿಚ್ಚಿನಂತೆ ಲಸಿಕೆಯಿಂದ ಸಾವು ಎಂಬ ಸುದ್ದಿ ಹರಡುತ್ತಿದ್ದಂತೆ, ಸಾರ್ವಜನಿಕರು ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಆಶಾ ಕಾರ್ಯಕರ್ತೆ ಲಸಿಕೆ ಹಾಕಿಸಲು ಹೆಚ್ಚು ಆಸಕ್ತಿ ತೋರಿದ್ದರಿಂದ ಆಶಾ ಕಾರ್ಯಕರ್ತರ ಮೇಲೆ ಆಕ್ರೋಶ ವ್ಯಕ್ತಪಡಿಸಿದರು. ಈ ಕಾರಣದಿಂದ ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತರು ಭಯಭೀತರಾಗಿದ್ದಾರೆ. ಆಸ್ಪತ್ರೆಗೆ ಬರಲು ವೈದ್ಯರು ಹಿಂಜರಿಯುತ್ತಿದ್ದು, ಪೊಲೀಸರ ಬೆಂಗಾವಲಿನಲ್ಲಿ ಆಸ್ಪತ್ರೆ ಪ್ರವೇಶಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಸಿಪಿಐ ಸಿದ್ದರಾಮೇಶ್ವರ ಹಾಗೂ ಪಿಎಸ್‍ಐ ಮುತ್ತರಾಜು ಭೇಟಿ ನೀಡಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
