ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಒಕ್ಕೂಟ ಕರೆ ನೀಡಿದ್ದು ಇದರಿಂದಾಗಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಎನ್‌ಡಬ್ಲೂಕೆಆರ್‌ಟಿಸಿ, ಕೆಕೆಆರ್‌ಟಿಸಿ ಸೇವೆಗಳ ಮೇಲೆ ಪರಿಣಾಮ ಬೀರಲಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಆರ್.ಚಂದ್ರಶೇಖರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. “ಸಾರಿಗೆ ನೌಕರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ನಾವು ಎಲ್ಲಾ ಪ್ರಯತ್ನ ಮಾಡಿದ್ದೇವೆ. 2016ರಿಂದ ನಮ್ಮ ನೌಕರರಿಗೆ ವೇತನ ಹೆಚ್ಚಳವಾಗಿಲ್ಲ, 2021ರಲ್ಲಿ ನಡೆದ ಮುಷ್ಕರದ ವೇಳೆ ಅಂದಿನ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ವೇತನ ಪರಿಷ್ಕರಣೆ ಮಾಡುವುದಾಗಿ ಲಿಖಿತ ಭರವಸೆ ನೀಡಿ ನಮ್ಮ ಇತರೆ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದ್ದರು. ಆದರೆ, ಎಲ್ಲಾ ಭರವಸೆಗಳು ಕಾಗದದಲ್ಲಿಯೇ ಉಳಿದಿವೆ ಮತ್ತು ನಮ್ಮ ನೌಕರರು ತೊಂದರೆ ಅನುಭವಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.