ಯೋಗೀಶ್ವರ್‌ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ : ಕುಮಾರಸ್ವಾಮಿ

ಬೆಂಗಳೂರು:

   ಚನ್ನಪಟ್ಟಣ ಉಪಚುನಾವಣೆಗೆ ಮಾಜಿ ಶಾಸಕ ಹಾಗೂ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರನ್ನು ಭೇಟಿಯಾಗಿ ಚರ್ಚೆ ನಡೆಸುವಂತೆ ಪಕ್ಷದ ಮುಖಂಡರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಸೂಚನೆ ನೀಡಿದ್ದಾರೆ.

   ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಇಂದು ಪಕ್ಷದ ಕಾರ್ಯಕರ್ತರು, ಮುಖಂಡರ ಜೊತೆ ಸಮಾಲೋಚನೆ ನಡೆಸಿದರು.

   ಜೆ.ಪಿ.ನಗರದ ತಮ್ಮ ನಿವಾಸದಲ್ಲಿ ಸಭೆ ನಡೆಸಿದ ಕುಮಾರಸ್ವಾಮಿ, ಅಭ್ಯರ್ಥಿ ಆಯ್ಕೆ ಸೇರಿದಂತೆ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಒಮ್ಮತವಾಗಿ ಚುನಾವಣೆ ಎದುರಿಸುವ ಬಗ್ಗೆ ಚರ್ಚಿಸಿದರು.

   ಈ ವೇಳೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ, ಅಭ್ಯರ್ಥಿ ಆಯ್ಕೆಯಲ್ಲಿ ಒಮ್ಮತಕ್ಕೆ ಬರಬೇಕು ಎಂದು ತಿಳಿಸಿದರು. ಅಭ್ಯರ್ಥಿ ಯಾರಾಗುತ್ತಾರೆ ಎನ್ನುವುದು ಮುಖ್ಯವಲ್ಲ. ಯಾರೇ ಆದರೂ ಅವರು ಎನ್​ಡಿಎ ಅಭ್ಯರ್ಥಿ ಆಗಿರುತ್ತಾರೆ. ಈ ಬಗ್ಗೆ ಯಾವುದೇ ಗೊಂದಲ ಬೇಡ. ಎಲ್ಲರೂ ಒಮ್ಮತವಾಗಿ, ಒಗ್ಗಟ್ಟಾಗಿ ಕೆಲಸ ಮಾಡಬೇಕು. ಮೈತ್ರಿ ಅಭ್ಯರ್ಥಿ ಗೆಲ್ಲಬೇಕು ಎನ್ನುವುದು ನಮ್ಮೆಲ್ಲರ ಗುರಿಯಾಗಬೇಕು ಎಂದು ಮುಖಂಡರಿಗೆ ಸ್ಪಷ್ಟವಾಗಿ ಹೇಳಿದರು.

   ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರನ್ನು ಪ್ರಮುಖ ಮುಖಂಡರೆಲ್ಲ ಹೋಗಿ ಖುದ್ದು ಭೇಟಿ ಮಾಡಿ, ಮುಕ್ತವಾಗಿ ಚರ್ಚಿಸಿ, ಯೋಗೇಶ್ವರ್ ಅವರನ್ನು ಎಲ್ಲಾ ಹಂತಗಳಲ್ಲಿಯೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು, ಅವರ ಮಾರ್ಗದರ್ಶನ ಪಡೆಯಬೇಕು ಎಂದು ತಿಳಿಸಿದರು.

   ಲೋಕಸಭೆ ಅಧಿವೇಶನದಲ್ಲಿ ಭಾಗವಹಿಸಿದ ನಂತರ ಮುಂದಿನ ವಾರ ಬೆಂಗಳೂರಿಗೆ ಭೇಟಿ ನೀಡಲಿದ್ದೇನೆ, ರಾಜ್ಯ ಮತ್ತು ರಾಷ್ಟ್ರೀಯ ಬಿಜೆಪಿ ನಾಯಕರೊಂದಿಗೆ ಸಮಾಲೋಚಿಸಿ ವಿವರವಾದ ಚರ್ಚೆಯ ನಂತರ ಅಭ್ಯರ್ಥಿ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ನೂರಾರು ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.

Recent Articles

spot_img

Related Stories

Share via
Copy link
Powered by Social Snap