ಹೆಣ್ಣುಮಕ್ಕಳ ಬೋಧನಾ ಶುಲ್ಕ ಮನ್ನಾ : ಕೃಷ್ಣ ಭೈರೇಗೌಡ

ಬೆಂಗಳೂರು

        ಸರ್ಕಾರಿ ಪದವಿಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹೆಣ್ಣುಮಕ್ಕಳ ಬೋಧನಾ ಶುಲ್ಕವನ್ನು ಮನ್ನಾ ಮಾಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ.

         ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಿಂದ ಒಟ್ಟು 3.17 ಲಕ್ಷ ವಿದ್ಯಾರ್ಥಿನಿಯರಿಗೆ ಅನುಕೂಲವಾಗಲಿದೆ. 1.84 ಲಕ್ಷ ಪದವಿ, 1.33 ಲಕ್ಷ ಪದವಿ ಪೂರ್ವ ವಿದ್ಯಾರ್ಥಿನೀಯರ 95 ಕೋಟಿ ರೂ ಶುಲ್ಕವನ್ನು ಸರ್ಕಾರವೇ ಭರಿಸಲಿದೆ.

        ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಭೈರೇಗೌಡ, ಈ ಬಾರಿಯ ಬಜೆಟ್ ನಲ್ಲಿ ಹೆಣ್ಣು ಮಕ್ಕಳ ಶಿಕ್ಷಣ ಶುಲ್ಕ ಮನ್ನಾ ಮಾಡುವುದಾಗಿ ಘೋಷಿಸಲಾಗಿತ್ತು. ಹೆಣ್ಣು ಮಕ್ಕಳ ಶೈಕ್ಷಣಿಕ ಅಭ್ಯುದಯದ ಉದ್ದೇಶದಿಂದ ಈ ತೀರ್ಮಾನ ತೆಗೆದುಕೊಂಡಿದ್ದು, ವಿದ್ಯಾರ್ಥಿನಿಯರು ಈಗಾಗಲೇ ಶುಲ್ಕ ಪಾವತಿಸಿದ್ದರೆ ಅದನ್ನು ಅವರ ಖಾತೆಗಳಿಗೆ ಮರು ಪಾವತಿಸುವುದಾಗಿ ಸ್ಪಷ್ಟಪಡಿಸಿದರು.

        ರಾಮನಗರ ಜಿಲ್ಲೆ ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಇದಕ್ಕಾಗಿ ಮೊದಲ ಹಂತದಲ್ಲಿ 90 ಕೋಟಿ ರೂ ಮಂಜೂರು ಮಾಡಲಾಗುವುದು. ಮುಂದಿನ ನಾಲ್ಕೈದು ವರ್ಷಗಳಲ್ಲಿ ಕಾಲೇಜು ಕಾರ್ಯಾರಂಭ ಮಾಡಲಿದ್ದು, ಇದಕ್ಕಾಗಿ ಒಟ್ಟಾರೆ 450 ಕೋಟಿ ರೂ ವೆಚ್ಚವಾಗಲಿದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ