ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಿ : ವಿನೋತ್ ಪ್ರಿಯಾ

ಚಿತ್ರದುರ್ಗ:

     ಇದೇ ಜೂನ್ 18 ರಂದು ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಯಲ್ಲಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆಗೆ ಸಂಬಂಧಿಸಿದಂತೆ ಶುಕ್ರವಾರ ಏರ್ಪಡಿಸಲಾದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

     ಕೋವಿಡ್ 19 ಸೋಂಕು ಹರಡುವ ಭೀತಿಯಿಂದ ಲಾಕ್‍ಡೌನ್ ಜಾರಿಗೊಳಿಸಿದ್ದರ ಪರಿಣಾಮವಾಗಿ ಪಿಯು ವಿದ್ಯಾರ್ಥಿಗಳಿಗೆ ಇಂಗ್ಲೀಷ್ ವಿಷಯದ ಪರೀಕ್ಷೆ ಬಾಕಿ ಉಳಿದಿತ್ತು. ಇದೀಗ ಬಾಕಿ ಉಳಿದಿದ್ದ ಇಂಗ್ಲೀಷ್ ವಿಷಯದ ಪರೀಕ್ಷೆ ಜೂ. 18 ರಂದು ಜಿಲ್ಲೆಯಲ್ಲಿ ನಡೆಯಲಿದೆ.ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಪರೀಕ್ಷೆ, ಸ್ಯಾನಿಟೈಜರ್ ಬಳಕೆ, ಮಾಸ್ಕ್ ಬಳಕೆ ಆಗುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಕುಡಿಯುವ ನೀರಿನ ಬಾಟಲನ್ನು ಮನೆಯಿಂದಲೇ ತರುವಂತೆ ಸೂಚನೆ ನೀಡಬೇಕು. ಜ್ವರ ಕಂಡುಬರುವ ಅಥವಾ ಅಸ್ವಸ್ಥ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲು ವ್ಯವಸ್ಥೆ ಮಾಡಿಕೊಳ್ಳಬೇಕು.

     ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಸೂಕ್ತ ಸಾರಿಗೆ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಕೆಎಸ್‍ಆರ್‍ಟಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸೌಲಭ್ಯ ಕಲ್ಪಿಸಬೇಕು. ಖಾಸಗಿ ಶಾಲಾ ಕಾಲೇಜುಗಳ ಬಸ್‍ಗಳ ಸೌಲಭ್ಯವನ್ನು ಕೂಡ ಸೇವೆಗೆ ಪಡೆಯಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು, ಯಾವುದೇ ಗೊಂದಲಕ್ಕೆ ಈಡು ಮಾಡದೆ, ಪರೀಕ್ಷೆಯನ್ನು ಸುಗಮವಾಗಿ ನಡೆಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

      ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಹೆಚ್.ಸಿ ಶೋಭರಾಣಿ ಅವರು ಪರೀಕ್ಷೆ ಕುರಿತು ವಿವರಣೆ ನೀಡಿ, ಜೂ. 18 ರಂದು ಬೆಳಿಗ್ಗೆ 10.15 ರಿಂದ 1.30 ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಜರ್ ಬಳಕೆ ಕಾರಣಗಳಿಗಾಗಿ ಬೆಳಿಗ್ಗೆ 8-30 ಗಂಟೆಯಿಂದಲೇ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಕಲ್ಪಿಸಲಾಗುವುದು. ಜಿಲ್ಲೆಯ 20 ಕ್ರೇಂದ್ರಗಳಲ್ಲಿ ಪರೀಕ್ಷೆ ನಡೆಯಲ್ಲಿದ್ದು ಒಟ್ಟು 15512 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ಹೊರಜಿಲ್ಲೆಯ 820 ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದರು

      ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಮಾಡಲಾಗುವುದು. ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಪ್ರತಿ ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಬೇರೆ ಜಿಲ್ಲಾ ಮಕ್ಕಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಹಾಗೂ ಜ್ವರ ಇರುವ ಮಕ್ಕಳಿಗೆ ಮುಜಾಗ್ರತಾ ಕ್ರಮವಾಗಿ ಪ್ರತ್ಯಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ ಕಡ್ಡಾಯವಾಗಿರುತ್ತದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಅಗತ್ಯವಾದ ಸಾರಿಗೆ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

    ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್. ಪಾಲಾಕ್ಷ, ಪ್ರಧಾನ ಅಂಚೆ ಕಚೇರಿಯ ಅಧಿಕಾರಿ ಕೆಂಪಲಕ್ಕಮ್ಮ, ಡಿಯುಡಿಸಿ ಯೋಜನಾ ನಿರ್ದೇಶಕ ರಾಜಶೇಖರ್, ಎಲ್ಲಾ ತಾಲ್ಲೂಕು ತಹಶೀಲ್ದಾರರು, ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರುಗಳು, ಕಾಲೇಜುಗಳ ಪ್ರಾಂಶುಪಾಲರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link