ಬೆಂಗಳೂರು:
ದೇಶದ ದಕ್ಷಿಣವನ್ನು ಸುತ್ತುವರೆದಿರುವ ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುತ್ತಿದ್ದು ಇದು ಮುಂದಿನ 5 ದಿನಗಳಲ್ಲಿ ಮಳೆಯ ತೀವ್ರತೆಯನ್ನು ಮತ್ತಷ್ಟು ಹೆಚ್ಚು ಮಾಡುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮುಂದಿನ 72 ಗಂಟೆ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮುಂದಿನ 48 ಗಂಟೆ ಹೆಚ್ಚು ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ 204.5 ಮಿಮೀ ಮಳೆಯಾಗುವ ಸಾಧ್ಯತೆ ಇದೆ ಮತ್ತು ಕೆಲದಿನಗಳ ಕಾಲ ಮೀನುಗಾರರು ಮೀನುಗಾರಿಕೆ ಮಾಡದಂತೆ ಇಲಾಖೆಯು ಎಚ್ಚರಿಕೆ ನೀಡಿದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಸೆ.20ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ದಾವಣಗೆರೆ, ಮಂಡ್ಯ ಮತ್ತು ಮೈಸೂರಿನಲ್ಲಿ ಸೆ. 21ರಂದು ಯೆಲ್ಲೋ ಅಲರ್ಟ್ ಇರಲಿದೆ. ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ