ಹಮಾಲರಿಗೆ ನಿವೇಶನ ನೀಡುವಂತೆ ಒತ್ತಾಯ

ಚಳ್ಳಕೆರೆ

       ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ಸಮಿತಿಯ ಚಳ್ಳಕೆರೆ ಘಟಕದಿಂದ ಇಲ್ಲಿ ಕಾರ್ಯನಿರ್ವಹಿಸುವ ಲೈಸನ್ಸ್ ಪಡೆದ ಎಲ್ಲಾ ಹಮಾಲರಿಗೂ ನಿವೇಶನ ನೀಡುವ ಸಲುವಾಗಿ ಆದಷ್ಟು ಬೇಗ ಭೂಮಿಯನ್ನು ಖರೀದಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಿದ ಹಮಾಲರು ಮಾನ್ಯ ಮುಖ್ಯಮಂತ್ರಿಗಳಿಗೆ ನಿವೇಶನ ಮಂಜೂರಾತಿಗಾಗಿ ಮನವಿ ಮಾಡಿದ್ಧಾರೆ.

        ಹಮಾಲರ ಸಂಘದ ಅಧ್ಯಕ್ಷ ಕೆ.ವಿ.ವೀರಭದ್ರಪ್ಪ ನೇತೃತ್ವದಲ್ಲಿ ಇಲ್ಲಿನ ಎಪಿಎಂಸಿ ಮಾರುಕಟ್ಟೆಯಿಂದ ಹೊರಟ ಮೆರವಣಿಗೆ ನೆಹರೂ ಸರ್ಕಲ್ ಮೂಲಕ ತಾಲ್ಲೂಕು ಕಚೇರಿಗೆ ಆಗಮಿಸಿ ತಹಶೀಲ್ದಾರ್ ಎಂ.ಮಲ್ಲಿಕಾರ್ಜುನವರಿಗೆ ಮನವಿ ನೀಡಿ, ನಗರದ ಎಲ್ಲಾ ಭಾಗಗಳ ಹಮಾಲರು ಲೈಸನ್ಸ್ ಪಡೆದಿದ್ದು, 500ಕ್ಕೂ ಹೆಚ್ಚು ಹಮಾಲರಿಗೆ ಕೂಡಲೇ ನಿವೇಶನ ನೀಡುವಂತೆ ಅವರು ತಾಲ್ಲೂಕು ಆಡಳಿತವನ್ನು ಒತ್ತಾಯಿಸಿದರು.

        ಈ ಬಗ್ಗೆ ರಾಜ್ಯ ಮುಖ್ಯಮಂತ್ರಿಗೆ ಮನವಿ ಮಾಡಿದ್ದು, ತಾಲ್ಲೂಕು ಹಾಗೂ ಜಿಲ್ಲಾ ಆಡಳಿತ ತುರ್ತು ಗಮನಹರಿಸಬೇಕೆಂದರು. ಈ ಹಿಂದೆಯೇ ಹಮಾಲರಿಗೆ ನಿವೇಶನ ನೀಡುವ ನಿಟ್ಟಿನಲ್ಲಿ 15 ಎಕರೆ ಜಮೀನನ್ನು ಮಂಜೂರು ಮಾಡಿದ್ದು, ಎಪಿಎಂಸಿ ಅಧಿಕಾರಿಗಳ ನಿರ್ಲಕ್ಷತನದಿಂದ ಜಮೀನು ಪಡೆಯಲು ಸಾಧ್ಯವಾಗಿಲ್ಲ, ಮಾನ್ಯ ಮುಖ್ಯಮಂತ್ರಿಗಳು ಈ ಬಗ್ಗೆ ಕೂಡಲೇ ಗಮನಹರಿಸುವಂತೆ ಅವರು ಒತ್ತಾಯಿಸಿದರು.

         ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಮಾತನಾಡಿ, ಕಳೆದ ಮೂರು ವರ್ಷಗಳ ಹಿಂದೆ ಎಪಿಎಂಸಿ ಅಧ್ಯಕ್ಷನಾದ ಸಂದರ್ಭದಲ್ಲೇ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದು, ಈ ಬಗ್ಗೆ ಎಪಿಎಂಸಿ ಮಂಡಳಿಯಲ್ಲಿ ತೀರ್ಮಾನಿಸಿ ಹಣ ಪಾವತಿಸುವಂತೆ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಈ ಸಂದರ್ಭದಲ್ಲಿ ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದು, ಇಂದು ಸುಮಾರು 500ಕ್ಕೂ ಹೆಚ್ಚು ಕಾರ್ಮಿಕರು ನಿವೇಶನವಿಲ್ಲದೆ ಪರದಾಡುವ ಸ್ಥಿತಿ ಉಂಟಾಗಿದೆ ಎಂದರು.

           ಪ್ರಧಾನ ಕಾರ್ಯದರ್ಶಿ ಟಿ.ತಿಪ್ಪೇಸ್ವಾಮಿ ಮಾತನಾಡಿ, ಈಗಾಗಲೇ ಕಳೆದ ಮೂರು ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ಸತ್ಯಾಗ್ರಹ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ವಿಜಯಕುಮಾರ್, ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ ಭೇಟಿ ನೀಡಿ, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ಕಳುಹಿಸಿಕೊಡುವ ಭರವಸೆ ನೀಡಿದ್ದರು. ಆದರೆ, ಈ ಬಗ್ಗೆ ಕ್ಷೇತ್ರದ ಶಾಸಕರೂ ಸೇರಿದಂತೆ ಯಾರಿಗೂ ನಿವೇಶನ ನೀಡುವ ನಿಟ್ಟಿನಲ್ಲಿ ಯಾವುದೇ ರೀತಿಯ ಕೆಲಸ ಕಾರ್ಯಗಳನ್ನು ಮಾಡದೆ ನಿರ್ಲಕ್ಷಿಸಿದ್ದಾರೆ. ಇದರಿಂದ ಹಮಾಲರ ನಿವೇಶನ ಪಡೆಯುವ ಕನಸು ನನಸಾಗುತ್ತಿಲ್ಲ. ಈ ಬಗ್ಗೆ ಕೂಡಲೇ ಜಿಲ್ಲಾಧಿಕಾರಿಗಳು ತುರ್ತು ಗಮನಹರಿಸುವಂತೆ ಒತ್ತಾಯಿಸಿದರು.

         ಈ ಸಂದರ್ಭದಲ್ಲಿ ಲೋಡಿಂಗ್ ಅಂಡ್ ಅನ್‍ಲೋಡಿಂಗ್ ಅಧ್ಯಕ್ಷ ಟಿ.ನಿಂಗಣ್ಣ, ಪ್ರಧಾನ ಕಾರ್ಯದರ್ಶಿ ಕೆ.ತಿಪ್ಪೇಸ್ವಾಮಿ, ನಾರಾಯಣ, ಚಕ್ಕಡಿ ಗಾಡಿ ಹಮಾಲ ಸಂಘದ ಅಧ್ಯಕ್ಷ ಎಸ್.ತಿಪ್ಪೇಸ್ವಾಮಿ, ಕಾರ್ಯದರ್ಶಿ ಕೆ.ಬಿ.ಜಯಣ್ಣ, ಉಪಾಧ್ಯಕ್ಷ ಈ.ನಾಗರಾಜ ಮುಂತಾದವರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link