ಬೆಂಗಳೂರು
ನಿಗಮ ಮಂಡಳಿ ಅಧ್ಯಕ್ಷರ ನೇಮಕ ಮತ್ತು ಕಾರ್ಯದರ್ಶಿಗಳ ನೇಮಕ ವಿವಾದ ಬಗೆಹರಿಸುವ ಜವಾಬ್ದಾರಿಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ,ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ವಹಿಸಿದ್ದಾರೆ.
ಕಾಂಗ್ರೆಸ್ ಲೋಕಸಭಾ ಚುನಾವಣೆ ತಯಾರಿ ಸಭೆ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ವೇಣುಗೋಪಾಲ್ ಹಾಗು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಸಕ್ತ ರಾಜಕೀಯ ಬೆಳವಣಿಗಳ ಬಗ್ಗೆ ಚರ್ಚೆ ನಡೆಸಿದರು.ಇದೇ ವೇಳೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ತಕ್ಷಣ ರಾಜಕೀಯ ಕಾರ್ಯದರ್ಶಿ,ಸಂಸದೀಯ ಕಾರ್ಯದರ್ಶಿಗಳು ಹಾಗು ತಡೆ ಹಿಡಿಯಲಾದ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಕಡತಕ್ಕೆ ಅಂಕಿತ ಹಾಕುವಂತೆ ಮನವೊಲಿಸಲು ಸಿದ್ದರಾಮಯ್ಯಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸೂಚಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಜಿಡಿಎಸ್ ಪಕ್ಷದ ಶಾಸಕಾಂಗ ಸಭೆ ನಡೆಯುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡದೆ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ನೇರವಾಗಿ ದೆಹಲಿಗೆ ತೆರಳಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.
ಇಂದು ಸಂಜೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಡಿಸಿಎಂ ಪರಮೇಶ್ವರ್ ಖಾಸಗಿ ಹೊಟೇಲಿಗೆ ಭೇಟಿ ನೀಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಚರ್ಚೆ ನಡೆಸಿ ಪಟ್ಟಿಗೆ ಅನುಮೋದನೆ ನೀಡುವಂತೆ ಮನವಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.