ಹೊನ್ನಾಳಿ:
ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಸಂಸದ ಜಿ.ಎಂ. ಸಿದ್ಧೇಶ್ವರ್ ಹೇಳಿದರು.ತಾಲೂಕಿನ ಕೂಲಂಬಿ ಗ್ರಾಮದಲ್ಲಿ ಸಂಸದರ ನಿಧಿಯಡಿ 5 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದ ಶಾಲಾ ಕೊಠಡಿಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಸರಕಾರ ಕಳೆದ ಐದು ವರ್ಷಗಳಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳಿಂದ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.
ನನ್ನ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಉತ್ತಮ ಮೂಲಭೂತ ಸೌಲಭ್ಯ ಮತ್ತು ಅಬಿವೃದ್ಧಿಯ ಹಿತದೃಷ್ಟಿಯಿಂದ ಸಂಸದರ ನಿಧಿಯಡಿ ಸಮುದಾಯ ಭವನ, ಶಾಲಾ ಕೊಠಡಿಗಳು, ಕಾಂಕ್ರೀಟ್ ರಸ್ತೆ, ಅಂಗನವಾಡಿ ಕೇಂದ್ರ, ಗ್ರಂಥಾಲಯ ಮುಂತಾದ ಶಾಶ್ವತ ಕಾಮಗಾರಿಗಳಿಗೆ ಹೆಚ್ಚು ಅನುದಾನ ನೀಡಿದ್ದೇನೆ ಎಂದು ವಿವರಿಸಿದರು.
ಶಾಸಕರ ಅನುದಾನದಡಿ ಕೂಲಂಬಿ-ಯಕ್ಕನಹಳ್ಳಿ ರಸ್ತೆ ಮತ್ತು 50 ಲಕ್ಷ ರೂ.ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಕಳೆದ ಬಾರಿ ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವದಲ್ಲಿದ್ದ ಸಂದರ್ಭದಲ್ಲಿ ಕೋಟ್ಯಂತರ ಅನುದಾನ ತಂದು ಹೊನ್ನಾಳಿ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗಿತ್ತು ಎಂದು ತಿಳಿಸಿದರು.ಕೂಲಂಬಿ ಗ್ರಾಪಂ ಅಧ್ಯಕ್ಷೆ ಗಾಯತ್ರಿ ಪ್ರಶಾಂತ್, ಜಿಪಂ ಸದಸ್ಯೆ ದೀಪಾ ಜಗದೀಶ್, ತಾಪಂ ಸದಸ್ಯೆ ಅಂಬುಜಾಕ್ಷಿ ಮರುಳಸಿದ್ಧಪ್ಪ, ಮುಕ್ತೇನಹಳ್ಳಿ ಗ್ರಾಪಂ ಅಧ್ಯಕ್ಷ ಗಂಗಾಧರ ಸೇರಿದಂತೆ ಗ್ರಾಪಂ ಸದಸ್ಯರು, ಗ್ರಾಮದ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ