ದಾಖಲೆ ಸಲ್ಲಿಸಿ ಆರೋಪ ಸಾಬೀತು ಪಡಿಸಲಿ

ದಾವಣಗೆರೆ:

          ತಮ್ಮ ವಿರುದ್ಧ ಅನಗತ್ಯ ಆರೋಪ ಮಾಡುತ್ತಿರುವ ದಲಿತ ಸಂಘರ್ಷ ಸಮಿತಿಯವರು, ನ್ಯಾಯಾಲಯಕ್ಕೆ ದಾಖಲೆಗಳನ್ನು ಸಲ್ಲಿಸಿ ಆರೋಪ ಸಾಬೀತುಪಡಿಸಬೇಕೆಂದು ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಗುರುಪಾದಯ್ಯ ಮಠದ್ ತಿಳಿಸಿದ್ದಾರೆ.

       ಈ ಕುರಿತು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತ್ಯಾಚಾರ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸುತ್ತಿರುವ ನನ್ನನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ದಾಖಲೆಗಳಿದ್ದರೆ ಇನ್ನೊಂದು ವಾರದಲ್ಲಿ ಪ್ರಕರಣದ ತನಿಖಾಧಿಕಾರಿ ಮತ್ತು ನ್ಯಾಯಾಲಯಕ್ಕೆ ಸಲ್ಲಿಸಿ ಆರೋಪ ಸಾಬೀತುಪಡಿಸಲಿ ಎಂದು ಹೇಳಿದರು.

         ಕಳೆದ ಜನವರಿ 30ರಂದು ನನ್ನ ಮೇಲೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಬೆದರಿಕೆ ಪ್ರಕರಣ ದಾಖಲಾಗಿದ್ದು, ಇದೀಗ ಜಾಮೀನು ಪಡೆದು ತನಿಖೆಗೆ ಸಹಕಾರ ನೀಡುತ್ತಿದ್ದೇನೆ. ಈ ಸಂದರ್ಭದಲ್ಲಿ ನಮ್ಮ ವಿರುದ್ಧ ಸುಳ್ಳು ಆರೋಪ ಮಾಡಿದ್ದ ಕರವೇ(ಪ್ರವೀಣಶೆಟ್ಟಿ ಬಣ) ಹೊನ್ನಾಳಿ ತಾಲೂಕು ಅಧ್ಯಕ್ಷ ಶ್ರೀನಿವಾಸ್ ಮೇಲೆ ಹೊನ್ನಾಳಿ ಪೊಲೀಸ್ ಠಾಣೆ ಹಾಗೂ ದಾವಣಗೆರೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ತಪ್ಪು ಯಾರೇ ಮಾಡಿದ್ದರೂ ಶಿಕ್ಷೆಯಾಗಬೇಕಾದ್ದು ಸರ್ವಸಮ್ಮತ. ಆದರೆ ಆರೋಪ ಸಾಬೀತಾಗುವ ಮುನ್ನವೇ ಅನಗತ್ಯ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಎ.ಉಮೇಶ್, ಪ್ರಸನ್ನ ಕುಮಾರ, ಹನುಮಂತಪ್ಪ ಸರಟೂರು, ಡಾ.ಉಮೇಶ್ ಹಿರೇಮಠ್ ಮತ್ತಿತರರು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link