ಬಾಲ್ಯ ವಿವಾಹ ತಡೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಿ: ಡಿಸಿ ರಾಕೇಶ್ ಕುಮಾರ್

ತುಮಕೂರು

      ಬಾಲ್ಯ ವಿವಾಹ ತಡೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ನಿಷೇಧ, ಮತ್ತಿತರ ಕಾಯ್ದೆ ಹಾಗೂ ಮಹಿಳಾ ಅಭಿವೃದ್ಧಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುವ ಸಮುದಾಯಗಳಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅವರು ತಿಳಿಸಿದರು.

      ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ನಡೆದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2018-19ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 45 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. 13 ಪ್ರಕರಣಗಳಲ್ಲಿ ಬಾಲ್ಯ ವಿವಾಹಗಳು ಜರುಗಿದ್ದು, ಸಂಬಂಧಿಸಿದವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

     ಬಾಲ್ಯ ವಿವಾಹ ಪ್ರಕರಣಗಳು ಕಂಡು ಬಂದಾಗ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ಪೊಲೀಸರ ಸಹಕಾರ ಪಡೆದು ಬಾಲ್ಯ ವಿವಾಹ ತಡೆಗಟ್ಟಬೇಕು. ಮಾಹಿತಿ ನೀಡುವ ಮಾಹಿತಿದಾರರ ಹೆಸರನ್ನು ಗೌಪ್ಯವಾಗಿ ಇಡಬೇಕು ಎಂದು ಅವರು ತಿಳಿಸಿದರು. ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ತಡೆಯಲಾದ 45 ಬಾಲ್ಯ ವಿವಾಹ ಕುರಿತು ಪ್ರಕರಣಗಳ ಸಕಾರಣವನ್ನು ಪತ್ತೆ ಹೆಚ್ಚಿ ಮುಂದಿನ ಸಭೆಯಲ್ಲಿ ಮಾಹಿತಿಯನ್ನು ನೀಡಬೇಕು. ಬಾಲ್ಯ ವಿವಾಹ ಪ್ರಕರಣಗಳು ಕೆಲವು ಸಮುದಾಯಗಳಲ್ಲಿ ಮಾತ್ರ ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿರುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ ಅಂತಹ ಸಮುದಾಯದ ಮುಖಂಡರಿಗೂ ಹೆಚ್ಚಿನ ಅರಿವನ್ನು ಮೂಡಿಸುವಂತೆ ಅವರು ಸೂಚಿಸಿದರು.

     ಜಿಲ್ಲೆಯಲ್ಲಿರುವ 10 ರಿಂದ 18 ವರ್ಷದೊಳಗಿನ ಎಲ್ಲಾ ಹೆಣ್ಣು ಮಕ್ಕಳ ಸಂಪೂರ್ಣ ಮಾಹಿತಿ, ಆಧಾರ್ ಸಂಖ್ಯೆಯನ್ನು ಸಂಗ್ರಹಿಸಿ ಡಿಜಟಲೀಕರಣ ಮಾಡುವಂತೆ ಸೂಚಿಸಿದ ಅವರು, ಇಂತಹ ಮಾಹಿತಿಯಿಂದ ಬಾಲ್ಯವಿವಾಹ ತಡೆ, ಹೆಣ್ಣು ಮಕ್ಕಳ ಮಾರಾಟ, ನಾಪತ್ತೆ, ಮತ್ತಿತರ ಪ್ರಕರಣಗಳಲ್ಲಿ ಅನುಕೂಲವಾಗಲಿದೆ ಎಂದರು. ಕೌಟುಂಬಿಕ ಮಹಿಳಾ ದೌರ್ಜನ್ಯ ಕಾಯ್ದೆಯಡಿ ಜಿಲ್ಲೆಯಲ್ಲಿ 18-19ನೇ ಸಾಲಿನ 199 ಪ್ರಕರಣಗಳು ದಾಖಲಾಗಿದ್ದು, 121 ಪ್ರಕರಣಗಳನ್ನು ಸಮಾಲೋಚನೆ ಮೂಲಕ ಇತ್ಯರ್ಥಪಡಿಸಲಾಗಿದೆ. ಒಂದು ವೇಳೆ ಮದ್ಯಪಾನದ ಕಾರಣದಿಂದ ಮಹಿಳೆಯರ ಮೇಲೆ ದೌರ್ಜನ್ಯ ನಡೆದರೆ ಅಂತಹ ಪ್ರಕರಣಗಳಲ್ಲಿ ಆ ವ್ಯಕ್ತಿಯನ್ನು ಮದ್ಯಪಾನ ಬಿಡಿಸುವ ಕೇಂದ್ರಗಳಿಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಬೇಕು ಎಂದು ಅವರು ಸೂಚಿಸಿದರು.

      ಪೋಕ್ಸೋ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಲ್ಲಿ ಪೋಷಕರು ಹಾಗೂ ಸಾಕ್ಷಿಗಳಿಗೆ ಪೊಲೀಸ್ ರಕ್ಷಣೆ ಒದಗಿಸಬೇಕು ಹಾಗೂ ಅವರಿಗೆ ಪ್ರಕರಣ ತೀವ್ರತೆ ಬಗ್ಗೆ ಅರಿವು ಮೂಡಿಸಬೇಕು. ಪೋಕ್ಸೊ ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಅವರು ಹೇಳಿದರು.

       ಜಿಲ್ಲೆಯಲ್ಲಿ 1463 ಲಿಂಗತ್ವ ಅಲ್ಪಸಂಖ್ಯಾತರು ಇದ್ದು, ಎಲ್ಲಾ ಇಲಾಖೆಗಳ ಅಭಿವೃದ್ಧಿ ಯೋಜನೆಗಳಲ್ಲಿ ಆದ್ಯತೆ ನೀಡಬೇಕು. ಇದಕ್ಕಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಕೋಶವನ್ನು ರಚಿಸಬೇಕು ಹಾಗೂ ಜಿಲ್ಲೆಗಳಲ್ಲಿರುವ ದಮನಿತ ಮಹಿಳೆಯರ ಜೀವನಮಟ್ಟ ಸುಧಾರಿಸಲು ವಿವಿಧ ಇಲಾಖೆಗಳ ಸಮನ್ವಯತೆ ಹಾಗೂ ಯೋಜನೆಗಳ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದ ಕೋಶವನ್ನು ರಚಿಸಬೇಕಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್ ಅವರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಕೆ.ವಂಶಿಕೃಷ್ಣ, ಜಿಲ್ಲಾ ಪಂಚಾಯತ್ ಸಿಇಓ ಶುಭಾ ಕಲ್ಯಾಣ್ ಸೇರಿದಂತೆ ವಿವಿಧ ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸ್ವಯಂ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap