ಹೊಸಪೇಟೆ:
ರಾಜ್ಯಾದ್ಯಂತ ಇರುವ ಬಡ ಪ್ರತಿಭಾವಂತ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಬಸ್‍ಪಾಸ್ ಉಚಿತವಾಗಿ ವಿತರಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ತಾಲೂಕು ಘಟಕದ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಸ್ಥಳೀಯ ತಹಸೀಲ್ದಾರ್ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು.
ಸ್ಥಳೀಯ ಕಾಲೇಜು ರಸ್ತೆಯಿಂದ ಹೊರಟ ನೂರಾರು ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಕೆಲ ಕಾಲ ಪ್ರತಿಭಟನೆ ನಡೆಸಿದರು.
2018-19ನೇ ಸಾಲಿನಲ್ಲಿ ರಾಜ್ಯ ಸರಕಾರ ಬಜೆಟ್‍ನಲ್ಲಿ ಎಸ್‍ಸಿ, ಎಸ್‍ಟಿ ಸೇರಿದಂತೆ ಎಲ್ಲ ವಿದ್ಯಾರ್ಥಿಗಳಿಗೆ ಬಸ್‍ಪಾಸ್‍ಗಳನ್ನು ಉಚಿತವಾಗಿ ವಿತರಿಸುವುದಾಗಿ ಘೋಷಣೆಮಾಡಲಾಗಿತ್ತು. ಆದರೆ ಈವರೆಗೂ ಬಸ್‍ಪಾಸ್‍ಗಳನ್ನು ನೀಡದೆ ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿದೆ ಎಂದು ಪ್ರತಿಭಟನಾ ನಿರತರ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಾದ್ಯಂತ ಈಗಾಗಲೇ ಬಹುತೇಕವಾಗಿ ಶಾಲೆ, ಕಾಲೇಜುಗಳು ಆರಂಭಗೊಂಡಿದೆ. ಗ್ರಾಮೀಣ ಭಾಗದ ಲಕ್ಷಾಂತರ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ನಿತ್ಯ ಸಂಚರಿಸುತ್ತಿದ್ದಾರೆ. ಶೈಕ್ಷಣಿಕ ಆರಂಭದಲ್ಲಿ ವಿದ್ಯಾಭ್ಯಾಸಕ್ಕೆ ಸಾಕಷ್ಟು ಹಣ ವೆಚ್ಚಮಾಡಲಾಗುತ್ತದೆ. ಅದರ ಜೊತೆಗೆ ಕಾಲೇಜು, ಶಾಲೆಗಳಿಗೂ ಬಸ್ ಓಡಾಟಕ್ಕೆ ಹಣ ವೆಚ್ಚಮಾಡುವಂತಾಗಿದೆ.
ಈ ಹಿನ್ನೆಲೆಯಲ್ಲಿ ಕೂಡಲೇ ರಾಜ್ಯ ಸರಕಾರ ಎಲ್ಲ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೂಡಲೇ ಬಸ್‍ಪಾಸ್ ವಿತರಿಸಬೇಕು ಎಂದು ಒತ್ತಾಯಿಸಿದರು. ನಂತರ ತಹಸೀಲ್ದಾರ್ ವಿಶ್ವನಾಥ್ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು. ವಿದ್ಯಾರ್ಥಿ ಮುಖಂಡರಾದ ಕಾರ್ತೀಕ್, ಆನಂದ್, ಅಭಿಜಿತ್, ಪರೀಕ್ಷಿತ್, ಗಾಳಪ್ಪ, ಪಾಂಡು, ಕೃಷ್ಣ, ಪ್ರಕೃತಿ, ಶ್ವೇತಾ, ಹರೀಶ್, ನಾಗರಾಜ್ ಮುಂತಾದವರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
