ಕುಡಿಯುವ ನೀರಿನ ಸಮಸ್ಯೆ: 168 ಗ್ರಾಮಗಳಿಗೆ ಟ್ಯಾಂಕರ್ ನೀರು ಸರಬರಾಜು

0
7

ತುಮಕೂರು

      ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಜಿಲ್ಲೆಯ 86 ಗ್ರಾಮಪಂಚಾಯತಿಗಳ 168 ಗ್ರಾಮಗಳಿಗೆ ಟ್ಯಾಂಕರ್ ಮೂಲಕ 452 ಟ್ರಿಪ್ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವುದಲ್ಲದೆ 198 ಖಾಸಗಿ ಕೊಳವೆಬಾವಿಗಳನ್ನು ಗುರುತಿಸಲಾಗಿದ್ದು, ಈ ಪೈಕಿ 135 ಕೊಳವೆಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಸಾರ್ವಜನಿಕರಿಗೆ ನೀರು ಸರಬರಾಜು ಮಾಡಲಾಗುತ್ತಿದೆ. ಪ್ರಸಕ್ತ ಕ್ಯಾಲೆಂಡರ್ ವರ್ಷದ ಜನವರಿ 1 ರಿಂದ ಈವರೆಗೂ 1088 ಕೊಳವೆ ಬಾವಿಗಳನ್ನು ಕೊರೆಸಲಾಗಿದ್ದು, ಇದರಲ್ಲಿ 778 ಬೋರ್‍ವೆಲ್‍ಗಳು ಸಫಲವಾಗಿವೆ.

       ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಸಾರ್ವಜನಿಕ ದೂರುಗಳನ್ನು ಸ್ವೀಕರಿಸುವ ಸಲುವಾಗಿ ಗ್ರಾಮಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತ್ ಹಂತದಲ್ಲಿ 24*7 ಅವಧಿಗಾಗಿ ಸಹಾಯವಾಣಿಯನ್ನು ತೆರೆಯಲಾಗಿದೆ. ಸಹಾಯವಾಣಿ ಮೂಲಕ ಸ್ವೀಕರಿಸುವ ದೂರುಗಳಿಗೆ 24 ಗಂಟೆಯೊಳಗಾಗಿ ಪರಿಹಾರ ಒದಗಿಸುವಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಮೇ 17ರಂದು ಜನಸ್ಪಂದನ:

       ಸಾರ್ವಜನಿಕ ಕುಡಿಯುವ ನೀರಿನ ಸಮಸ್ಯೆಯಲ್ಲದೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಾರ್ವಜನಿಕ ಕುಂದುಕೊರತೆ, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಲು ಮೇ 17ರಂದು ಜನಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತಿದೆ. ಮೇ ಮಾಹೆಯ 17ರಂದು ಬೆಳಿಗ್ಗೆ 8 ಗಂಟೆಯಿಂದ 11.30ರವರೆಗೆ ಗುಬ್ಬಿ ತಾಲ್ಲೂಕು ನಿಟ್ಟೂರು ಗ್ರಾಮ ಪಂಚಾಯತಿಯಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಅವರು ಮನವಿ ಮಾಡಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here