ವಾಯುಭಾರ ಕುಸಿತ : 24 ಗಂಟೆಗಳಲ್ಲಿ 320 ಮನೆಗಳಿಗೆ ಹಾನಿ…!

ಬೆಂಗಳೂರು

    ವಾಯುಭಾರ ಕುಸಿತದಿಂದಾಗಿ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ತಲೆದೋರಿದೆ.

    ಮಳೆಯಿಂದಾಗಿ ಕಳೆದ 24 ಗಂಟೆಗಳಲ್ಲಿ 320 ಮನೆಗಳು ಹಾನಿಯಾಗಿದ್ದು, 326 ಜನರನ್ನು 13 ಪರಿಹಾರ ಶಿಬಿರಗಳಿಗೆ ಸ್ಥಳಾಂತರ ಮಾಡಲಾಗಿದೆ. ಮುಂದಿನ ಮೂರ್ನಾಲ್ಕು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಂಭವವಿರುವುದಾಗಿ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.

   ಭಾರಿ ಮಳೆಯಿಂದಾಗಿ ವಿಜಯಪುರ ಜಿಲ್ಲೆಯ ಡೋಣಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ, ತಾಳಿಕೋಟೆ ರಸ್ತೆ, ಸೇತುವೆ ಜಲಾವೃತಗೊಂಡಿದೆ. ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಲ್ಲಿನ ನೀರಿನ ಮಟ್ಟದಲ್ಲಿ ಕಳೆದ ಮೂರು ದಿನಗಳಿಂದಲೂ ಏರಿಕೆಯಾಗುತ್ತಿದೆ. ಅಲಮಟ್ಟಿ ಜಲಾಶಯದಲ್ಲಿ 1 ಲಕ್ಷದ 17 ಸಾವಿರ ಕ್ಯೂಸೆಕ್ ನೀರಿನ ಒಳಹರಿವಿದ್ದು, 1 ಲಕ್ಷದ 17 ಸಾವಿರ ಕ್ಯೂಸೆಕ್ಸ್ ನೀರಿನ ಹೊರಹರಿವಿದೆ.ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಮಲ್ಲಪ್ರಭಾ ಹಾಗೂ ಘಟಪ್ರಭೆ ನದಿಯ ಅಬ್ಬರ ಹೆಚ್ಚಾಗಿದ್ದು, ಪ್ರವಾಹ ಭೀತಿ ಎದುರಾಗಿದೆ.

     ಮುಧೋಳ ತಾಲ್ಲೂಕಿನ ಮಾಚಕನೂರು ಗ್ರಾಮದ ಪ್ರಸಿದ್ಧ ಹೊಳೆಬಸವೇಶ್ವರ ದೇವಸ್ಥಾನಕ್ಕೆ ಮತ್ತಷ್ಟು ನೀರು ನುಗ್ಗಿದ್ದು ಮತ್ತೆ ದೇವಸ್ಥಾನಕ್ಕೆ ಜಲದಿಗ್ಬಂಧನ ಮುಂದುವರೆದಿದೆ. ಕಲಬುರಗಿ ಜಿಲ್ಲೆಯಾದ್ಯಂತ ಕಳೆದ 10 ಗಂಟೆಗಳಿಂದ ಸತತ ಮಳೆಯಾಗುತ್ತಿದ್ದು, ಚಿಂಚೋಳಿ ತಾಲ್ಲೂಕಿನ ಚಂದ್ರಮಪಳ್ಳಿ ಜಲಾಶಯದ ಒಳ ಹರಿವು ಹೆಚ್ಚಾಗಿದೆ. ರಸ್ತೆಗಳು ಜಲಾವೃತಗೊಂಡು ಹಲವೆಡೆ ಸಂಪರ್ಕ ಕಡಿತ ಗೊಂಡಿದೆ.

    ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪೂರ ಗ್ರಾಮದ ಬಸವಸಾಗರ ಜಲಾಶಯದಿಂದ ಕೃಷ್ಣ ನದಿಗೆ 1,62,100 ಕ್ಯೂಸೆಕ್ ನೀರನ್ನು ಬಿಡಲಾಗಿದ್ದು, ನದಿಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಚಿತ್ತಾಪೂರ ತಾಲ್ಲೂಕಿನ ಸನ್ನತಿ ಬ್ಯಾರೇಜಿನಿಂದ ಯಾದಗಿರಿ ನಗರದ ಭೀಮಾಗೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬಂದಿದೆ. ಇಲ್ಲಿನ ಕಂಗಳೇಶ್ವರ ದೇವಸ್ಥಾನ ಹಾಗೂ ಶ್ರೀವೀರಾಂಜನೇಯ ದೇವಸ್ಥಾನಗಳೆರಡೂ ಸಂಪೂರ್ಣ ಮುಳುಗಡೆಯಾಗಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap