ವಾಲ್ಮೀಕಿ ಜಾತ್ರೆ ಸಿದ್ಧತೆಗೆ 4.47 ಕೋಟಿ ಬಿಡುಗಡೆ

ದಾವಣಗೆರೆ :

     ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಬರುವ ಫೆಬ್ರುವರಿ 8 ಮತ್ತು 9 ರಂದು ಆಯೋಜಿಸಲು ದ್ದೇಶಿಸಿರುವ ವಾಲ್ಮೀಕಿ ಜಾತ್ರಾ ಮಹೋತ್ಸವದ ಸಿದ್ಧತೆಗಾಗಿ ರಾಜ್ಯ ಸರ್ಕಾರ 4.47 ಕೋಟಿ ರೂ. ಬಿಡುಗಡೆ ಮಾಡಿದ್ದು, ಸಿದ್ಧತಾ ಕಾಮಗಾರಿಗಳು ಭರದಿಂದ ಸಾಗಿವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

    ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷೆತೆ ವಹಿಸಿ ಮಾತನಾಡಿದ ಅವರು, ವಾಲ್ಮೀಕಿ ಜಾತ್ರೆಯ ಸಿದ್ಧತೆಗಾಗಿ ರಾಜ್ಯ ಸರ್ಕಾರ ಈಗಾಗಲೇ 4.47 ಕೋಟಿ ರೂ. ಹಣ ಜಿಲ್ಲಾಡಳಿತಕ್ಕೆ ಬಿಡುಗಡೆ ಮಾಡಿದೆ. ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಸಿದ್ದತಾ ಕಾರ್ಯಗಳು ಆರಂಭಗೊಂಡಿದ್ದು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜತೆಗೆ ಸರ್ಕಾರದ ವಿವಿಧ ಇಲಾಖೆಗಳಿಂದ ಸಾರ್ವಜನಿಕರಿಗೆ ದೊರೆಯುವ ವಿವಿಧ ಸೌಲಭ್ಯಗಳು ಹಾಗೂ ಪರಿಶಿಷ್ಟ ಪಂಗಡದವರ ಕಲ್ಯಾಣ ಕಾರ್ಯಕ್ರಮಗಳನ್ನು ಬಿಂಬಿಸುವ ವಸ್ತು ಪ್ರದರ್ಶನ ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

     ಜಾತ್ರೆಯ ದಿನಗಳಂದು ಶ್ರೀಮಠವು ಪ್ರಸಾದ ವ್ಯವಸ್ಥೆ ಮಾಡಿದ್ದು, ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ಆಹಾರ ಪರೀಕ್ಷೆ ನಡೆಸಬೇಕು. ಕುಡಿಯುವ ನೀರು ಸರಬರಾಜು ಇಲಾಖೆಯವರು ಕುಡಿಯುವ ನೀರಿನ ವವ್ಯಸ್ಥೆ, ಮೊಬೈಲ್ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ಕಡೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಶ್ರೀಮಠಕ್ಕೆ ತೆರಳುವ ದಾರಿ ಕಿರಿದಾಗಿದ್ದು, ಅಕ್ಕಪಕ್ಕದ ಜಮೀನಿನ ರೈತರುಗಳ ಮನವೊಲಿಸಿ ಮಠಕ್ಕೆ ಸಾಗಲು ರಸ್ತೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

     ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿ, ರಾಜ್ಯದ 4ನೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ವಾಲ್ಮೀಕಿ ಸಮಾಜದ ಬಾಂಧವರು 28 ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಇಂತಹ ದೊಡ್ಡ ಸಮುದಾಯವು ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಹಾಗಾಗಿ ತಮ್ಮ ಹಕ್ಕೋತ್ತಾಯಗಳನ್ನು ವಾಲ್ಮೀಕಿ ಜಾತ್ರೆಯ ಮೂಲಕ ರಾಜ್ಯ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

     2ನೇ ಬಾರಿ ಶ್ರೀಮಠದಲ್ಲಿ ನಡೆಯುತ್ತಿರುವ ಎರಡು ದಿನಗಳ ವಾಲ್ಮೀಕಿ ಜಾತ್ರೆಗೆ ರಾಜ್ಯದ ವಿವಿಧ ಮೂಲೆಗಳಿಂದ ಲಕ್ಷಾಂತರ ಜನ ಆಗಮಿಸುವ ನಿರೀಕ್ಷೆ ಇದೆ. ಈ ಸಂದರ್ಭವನ್ನು ಸದುಪಯೋಗ ಪಡಿಸಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪ್ರಿಯ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ದೊರೆಯುವಂತೆ ಮಾಡಲು ಹಾಗೂ ಎಲ್ಲಾ ಕಾರ್ಯಕ್ರಮಗಳ ಮಾಹಿತಿ ಎಲ್ಲರಿಗೂ ಸಿಗುವಂತೆ ಜಾಗೃತಿ ಮೂಡಿಸಲಾಗುವುದು ಎಂದು ಅವರು ತಿಳಿಸಿದರು.

     ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಮಹಿಳೆಯರು ಮತ್ತು ಮಕ್ಕಳ ದೃಷ್ಟಿಯಿಂದ ಒಂದು ಔಟ್‍ಪೋಸ್ಟ್ ತೆರೆಯಲಾಗುವುದು. ಹಾಗೂ ಅಗತ್ಯವಿರುವೆಡೆ ಸಿ.ಸಿ ಕ್ಯಾಮರ ವ್ಯವಸ್ಥೆ ಮಾಡುವುದರೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ವಾಹನ ನಿಲುಗಡೆ ಹಾಗೂ ವಿಐಪಿಗಳ ವಾಹನ ನಿಲುಗಡೆಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು. ಪೊಲೀಸ್ ಇಲಾಖೆ ವತಿಯಿಂದ ಅಪರಾಧ ತಡೆಗಟ್ಟುವಿಕೆ, ಜಾಗೃತಿಯ ಬಗ್ಗೆ ಮಳಿಗೆ ನಿರ್ಮಿಸಲಾಗುವುದು ಎಂದರು.

    ಸಭೆಯಲ್ಲಿ ಜಿ.ಪಂ ಸಿಇಒ ಪದ್ಮ ಬಸವಂತಪ್ಪ, ಸದಸ್ಯ ಓಬಳಪ್ಪ, ಕೆಪಿಎಸ್‍ಸಿ ಮಾಜಿ ಸದಸ್ಯರು, ಜಾತ್ರಾ ಮಹೋತ್ಸವ ಸಮಿತಿ ಸಂಚಾಲಕರು ಆದ ಜಿ.ಟಿ ಚಂದ್ರಶೇಖರ್, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಜಿಲ್ಲಾ ಪರಿಶಿಷ್ಠ ವರ್ಗಗಳ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ಸುರೇಶ್ ರೆಡ್ಡಿ, ನಗರಾಭಿವೃದ್ದಿ ಕೋಶದ ನಜ್ಮಾ.ಜಿ, ದೂಡ ಆಯುಕ್ತ ಬಿ.ಟಿ.ಕುಮಾರಸ್ವಾಮಿ ಮತ್ತಿತರರು ಹಾಜರಿದ್ದರು.

 

Recent Articles

spot_img

Related Stories

Share via
Copy link
Powered by Social Snap