ಬೆಳಗಾವಿ
ರಾಜ್ಯದಲ್ಲಿ ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ಸರ್ಕಾರ ನಿರ್ಲಕ್ಷ್ಯ ವಹಿಸಿಲ್ಲ. ಬರ ಪೀಡಿತ ತಾಲೂಕುಗಳಿಗೆ 50 ಲಕ್ಷ ರೂ ಬರ ಹಣವನ್ನು ಪರಿಹಾರ ಕಾಮಗಾರಿಗಳಿಗಾಗಿ ಒದಗಿಸಲಾಗಿದ್ದು, ಮತ್ತೆ ಹೆಚ್ಚುವರಿಯಾಗಿ 50 ಲಕ್ಷ ರೂ. ಹಾಗೂ ಬರ ಇಲ್ಲದ ತಾಲ್ಲೂಕುಗಳಿಗೆ 25 ಲಕ್ಷ ಅನುದಾನವನ್ನು ತುರ್ತಾಗಿ ಒದಗಿಸುವುದಾಗಿ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ವಿಧಾನಸಭೆಯಲ್ಲಿಂದು ಪ್ರಕಟಿಸಿದರು.
ಬರ ಪರಿಸ್ಥಿತಿ ಕುರಿತು ನಡೆದ ಚರ್ಚೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ-2016 ರ ಅನ್ವಯ ರಾಜ್ಯದಲ್ಲಿ ಈಗಾಗಲೇ ನೂರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಶೀಘ್ರ ಮತ್ತಷ್ಟು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಪ್ರಕಟಿಸಲಾಗುವುದು. ಬರ ನಿರ್ವಹಣೆ ಸಂಬಂಧ ಸರ್ಕಾರ ಮುಂದಾಲೋಚನೆ ಮಾಡಿ ಎಲ್ಲಾ ಅಗತ್ಯ ಕ್ರಮ ಕೈಗೊಂಡಿದ್ದು, ಕಾಮಗಾರಿಗೆ ಹಣಕಾಸಿನ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯ ಕಳೆದ 14 ವರ್ಷಗಳಲ್ಲಿ ಬರ ಪರಿಸ್ಥಿತಿ ಎದುರಿಸಿದ್ದು, ಕೇಂದ್ರ ಸರ್ಕಾರ ದೇಶದ 24 ಜಿಲ್ಲೆಗಳಲ್ಲಿ ಕರ್ನಾಟಕದ 16 ಜಿಲ್ಲೆಗಳು ನಿರಂತರ ಬರದ ಜಿಲ್ಲೆಗಳೆಂದು ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ಸತತ ಬರಗಾಲ ಸ್ಥಿತಿಯಲ್ಲಿರುವ ಕರ್ನಾಟಕ ರಾಜ್ಯದಲ್ಲಿನ ಬರಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯಕ್ರಮಗಳನ್ನು ಕೈಗೊಂಡಿದೆ ಎಂದರು.
ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ರಾಜ್ಯದ 17 ಜಿಲ್ಲೆಗಳ 206 ಗ್ರಾಮಗಳಲ್ಲಿ 409 ಟ್ಯಾಂಕರ್‍ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಅಲ್ಲದೇ 282 ಖಾಸಗಿ ಕೊಳವೆಬಾವಿ ಮಾಲೀಕರೊಂದಿಗೆ ಕುಡಿಯುವ ನೀರು ಒದಗಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ.
ಇದಕ್ಕಾಗಿ ಆಯಾ ತಾಲೂಕುಗಳಲ್ಲಿ ತಹಶೀಲ್ದಾರರ ಪಿ.ಡಿ. ಖಾತೆಗಳಲ್ಲಿ ಕನಿಷ್ಠ 10 ಲಕ್ಷ ರೂ.ಹಣ ಇಡಲಾಗಿದೆ. ರಾಜ್ಯದಲ್ಲಿ ಜಾನುವಾರುಗಳಿಗೆ 92.69 ಮೆಟ್ರಿಕ್‍ಟನ್ ಮೇವಿನ ಅಗತ್ಯವಿದೆ. ಈಗಾಗಲೇ ಪಶುಸಂಗೋಪನೆ ಇಲಾಖೆಯಿಂದ 15 ಕೋಟಿ. ರೂ. ವೆಚ್ಚದಲ್ಲಿ ಮೇವಿನ ಮಿನಿ ಕಿಟ್‍ಗಳನ್ನು ವಿತರಿಸಲಾಗಿದೆ. ಜಿಲ್ಲಾಧಿಕಾರಿಗಳ ಮೂಲಕ ಮೇವು ಸಂಗ್ರಹಣಾ ಕೇಂದ್ರ ಹಾಗೂ ಗೋಶಾಲೆಗಳನ್ನು ನಿರ್ಮಿಸಲು ಸ್ಥಳ ಗುರುತಿಸಲಾಗಿದ್ದು, ರಾಜ್ಯದಲ್ಲಿ 224 ಮೇವು ಸಂಗ್ರಹಣಾ ಕೇಂದ್ರಗಳು ಹಾಗೂ 269 ಗೋಶಾಲೆಗಳನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ದೇಶಪಾಂಡೆ ಮಾಹಿತಿ ನೀಡಿದರು.
ಪಶುಸಂಗೋಪನೆ ಇಲಾಖೆ ಸಚಿವ ವೆಂಕಟರಾವ್ ನಾಡಗೌಡ ಮಾತನಾಡಿ, ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನಲೆಯಲ್ಲಿ ದನಕರುಗಳು, ಜಾನುವಾರುಗಳ ಮೇವಿಗೆ ಕೊರತೆಯಾಗಬಾರದೆಂಬ ಕಾರಣಕ್ಕೆ ಅಂತಾರಾಜ್ಯ ಮೇವು ಸಾಗಣೆ ನಿಷೇಧ ಮಾಡಲಾಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.
ರಾಜ್ಯದಲ್ಲಿ ಹಿಂಗಾರು ಹಂಗಾಮಿನಲ್ಲಿ ವ್ಯಾಪಕ ಮಳೆ ಕೊರತೆಯಾಗಿದ್ದು, ತಾವು ಪ್ರತಿನಿಧಿಸುವ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸುವಂತೆ ಬಿಜೆಪಿ ಶಾಸಕರು ರಾಜ್ಯ ಸರ್ಕಾರದ ಮೇಲೆ ಏಕಾ ಏಕಿ ಮುಗಿ ಬಿದ್ದರು. ಇದರಿಂದ ಕೃಷಿ ಸಚಿವ ಶಿವಶಂಕರ ರೆಡ್ಡಿ ವಿಚಲಿತರಾದರು. ನಿಯಮಾವಳಿ ಪ್ರಕಾರ ಬರ ಪೀಡಿ ತಾಲ್ಲೂಕುಗಳನ್ನು ಪ್ರಕಟಿಸಬೇಕಾಗುತ್ತದೆ ಎಂದು ಸಮರ್ಥಿಸಿಕೊಳ್ಳಲು ಮುಂದಾದರು.
ಶವಶಂಕರ ರೆಡ್ಡಿ ಉತ್ತರ ಮುಂದುವರೆಸಿ, ನಿರಂತರ ಬರದಿಂದ ತತ್ತರಿಸಿರುವ ಹಿನ್ನಲೆಯಲ್ಲಿ ಬರ ನಿಯಂತ್ರಣ ಮತ್ತು ಬರ ಶಾಶ್ವತ ಪರಿಹಾರಕ್ಕೆ ತಜರ ಸಮಿತಿ ರಚಿಸಲು ಸರ್ಕಾರ ತೀರ್ಮಾನಿಸಿದೆ.
ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರ್ ಗಳು ಬರ ಪರಿಹಾರದಲ್ಲಿ ನಿರ್ಲಕ್ಷ್ಯವಹಿಸಿದರೆ ಅಂತಹ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಅವರು ಸಂದೇಶ ರವಾನಿಸಿದ್ದಾರೆ. ಅಲ್ಲದೆ ಬೆಳೆ ವಿಮೆಯಲ್ಲಿ ನಡೆಯುತ್ತಿರುವ ಅವ್ಯವಹಾರದ ಹಿನ್ನಲೆಯಲ್ಲಿ ನೂತನ ವಿಮಾ ಪದ್ದತಿಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ. ಬಿಹಾರ ಮಾದರಿಯಲ್ಲಿ ಬೆಳೆ ವಿಮೆ ಜಾರಿಗೊಳಿಸುವ ಮೂಲಕ ರೈತರ ಹಿತ ಕಾಪಾಡಲು ಸರ್ಕಾರ ಪರಿಶೀಲಿಸುತ್ತಿದೆ ಎಂದು ಸಚಿವರು ಸದನಕ್ಕೆ ಭರವಸೆ ನೀಡಿದರು.
ಬಿಜೆಪಿ ಶಾಸಕರು ತಾವು ಪ್ರತಿನಿಧಿಸುವ ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲೇಬೇಕು ಎಂದು ಪಟ್ಟು ಹಿಡಿದಾಗ ಮಧ್ಯೆ ಪ್ರವೇಶಿಸಿದ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ, ಈ ಮಾಸಾಂತ್ಯದ ವೇಳೆಗೆ ಮತ್ತಷ್ಟು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸುವುದಾಗಿ ಭರವಸೆ ನೀಡಿ ಗೊಂದಲಕ್ಕೆ ತೆರೆ ಎಳೆದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ