ಚಾಮರಾಜನಗರ
ಸುಳ್ವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರೆಸಿ ಬಂಧನಕ್ಕೊಳಗಾಗಿದ್ದ ನಾಲ್ವರು ಆರೋಪಿಗಳನ್ನು ಕೊಳ್ಳೇಗಾಲ ನ್ಯಾಯಾಲಯ ನಾಲ್ಕು ದಿನಗಳ ವರೆಗೆ ಪೊಲೀಸರ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
ಪ್ರಸಾದದಲ್ಲಿ ವಿಷ ಬೆರೆಸಿದ ಆರೋಪದಡಿ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಕಿರಿಯ ಸ್ವಾಮೀಜಿ ಇಮ್ಮಡಿ ಮಹಾದೇವ ಸೇರಿದಂತೆ ದೇವಸ್ಥಾನದ ವ್ಯವಸ್ಥಾಪಕ ಮಾದೇಶ, ಆತನ ಪತ್ನಿ ಅಂಬಿಕಾ ಹಾಗೂ ಅರ್ಚಕ ದೊಡ್ಡಯ್ಯನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದರು.
ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದಲ್ಲಿ ವಿಷ ಬೆರೆಸಿದ ಪ್ರಸಾದ ಸೇವಿಸಿ ಸುಮಾರು 15 ಜನರು ಸಾವನ್ನಪ್ಪಿದ್ದು, 90ಕ್ಕೂ ಹೆಚ್ಚು ಜನ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ರಾತ್ರಿ ಕೊಳ್ಳೆಗಾಲ ನ್ಯಾಯಾಲಯದ ನ್ಯಾಯಮೂರ್ತಿ ಶ್ರಿಕಾಂತ್ ಅವರ ಮನೆಯಲ್ಲಿ ಆರೋಪಿಗಳ ವಿಚಾರಣೆ ನಡೆಸಿ ಮುಂದಿನ ತನಿಖೆ ನಡೆಸುವಂತೆ ನಾಲ್ಕು ದಿನಗಳ ವರೆಗೆ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
ಬಿಗಿ ಬಂದೋಬಸ್ತ್ ಮಧ್ಯಯೆ ಆರೋಪಿಗಳನ್ನು ನ್ಯಾಯಧೀಶರ ಮನೆಗೆ ಕರೆದುಕೊಂಡು ಬಂದಿದ್ದ ಪೊಲೀಸರು ಅವರನ್ನು 10 ದಿನಗಳ ವರೆಗೆ ತಮ್ಮ ವಶಕ್ಕೆ ಒಪ್ಪಿಸಬೇಕು ಎಂದು ಕೇಳಿಕೊಂಡರು. ಆದರೆ, ಆರೋಪಿಗಳನ್ನು ನಾಲ್ಕು ದಿನಗಳ ವರೆಗೆ ಮಾತ್ರ ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಬೇಕು ಎಂದು ನ್ಯಾಯಾಧೀಶರು ನಿರ್ದೇಶಿಸಿದರು.
ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ನೇತೃತ್ವದ ತಂಡ ಪ್ರಕರಣದ ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಸಂಗ್ರಹಿಸಲು ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ.
ವಿಷ ಪ್ರಸಾದ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ 25 ಜನರನ್ನು ಬಿಡುಗಡೆಗೊಳಿಸಲಾಗಿದ್ದು, ಅವರವರ ಗ್ರಾಮಗಳಿಗೆ ಕಳುಹಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ