ಪ್ರವಾಹ ಪರಿಸ್ಥಿತಿ : ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ : ಸಿಎಂ

ಬೆಳಗಾವಿ

     ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ಪಡೆಯಲು ಎಲ್ಲಾ ಶಾಸಕರ ಸಭೆ ಕರೆದು ಸೂಕ್ತ ಯೋಜನೆ ರೂಪಿಸಲಾಗುವುದು. ಮುಂದಿನ ವಾರ ದೆಹಲಿಗೆ ತೆರಳಿ ಹೆಚ್ವಿನ ನೆರೆ ಪರಿಹಾರ ಬಿಡುಗಡೆಗೆ ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

    ಅತಿವೃಷ್ಟಿಗೆ ಸಂಬಂಧಿಸಿದಂತೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆದ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಕೋವಿಡ್-19 ಸಂಕಷ್ಟ ಇರುವುದರಿಂದ ಎನ್.ಡಿ.ಆರ್.ಎಫ್. ಅನುದಾನದಡಿ ತುರ್ತು ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದರು.

    ಬೆಳಗಾವಿ ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಯಡಿಯೂರಪ್ಪ, ಪ್ರವಾಹ ನಿರ್ವಹಣೆ ಮತ್ತಿತರ ತುರ್ತು ಕೆಲಸಕ್ಕೆ ಬೆಳಗಾವಿ ಜಿಲ್ಲೆಯಲ್ಲಿ 412 ಕೋಟಿ ರೂಪಾಯಿ ಅನುದಾನ ಲಭ್ಯವಿದೆ. ಹೆಚ್ಚಿನ ಹಣ ಬೇಕಾದರೆ ತಕ್ಷಣವೇ ಬಿಡುಗಡೆ ಮಾಡಲಾಗುವುದು. ಜಿಲ್ಲೆಯಲ್ಲಿ ಮನೆ ನಿರ್ಮಾಣಕ್ಕೆ 174 ಕೋಟಿ ರೂಪಾಯಿ ಲಭ್ಯವಿದ್ದು, ಇದಲ್ಲದೇ ಉಳಿದಿರುವ ಅನುದಾನದಲ್ಲಿ ರಸ್ತೆ ದುರಸ್ತಿ ಮತ್ತಿತರ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು.

    ಇದೇ ರೀತಿ ಇತರೆ ಜಿಲ್ಲೆಗಳಲ್ಲಿ ಸಾಕಷ್ಟು ಹಣ ಲಭ್ಯವಿದೆ. ಮನೆ ಕಳೆದುಕೊಂಡಿರುವ ಬೆಳಗಾವಿಯ 44,156 ಫಲಾನುಭವಿಗಳಿಗೆ 488 ಕೋಟಿ ಪರಿಹಾರ ಬಿಡುಗಡೆಯಾಗಿದೆ. ಧಾರವಾಡ ಜಿಲ್ಲೆಯ ಸಮಸ್ಯೆಗಳನ್ನು ಗಮನಕ್ಕೆ ಬಂದಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಆಧರಿಸಿ ಮನೆ ಹಾಗೂ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

    ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಪ್ರವಾಹ ಸ್ಥಿತಿಗತಿಯ ಬಗ್ಗೆ ಮಾಹಿತಿ ನೀಡಿದರು.ಕಂದಾಯ ಸಚಿವ ಆರ್.ಅಶೋಕ, ಕಳೆದ ವರ್ಷದ ಮನೆಪರಿಹಾರ ನೀಡುವ ತಂತ್ರಾಂಶ ಪುನಃ ಆರಂಭಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

     ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ,ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್, ಅವರು ಪ್ರವಾಹ ನಿರ್ವಹಣೆ ಮತ್ತು ಪರಿಹಾರ ಕ್ರಮಗಳ ಕುರಿತು ಬೆಳಕು ಚೆಲ್ಲಿದರು.

    ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಜಿಲ್ಲೆಯ ಇನ್ನೂ 9 ಸಾವಿರ ಮನೆಗಳನ್ನು ಪರಿಹಾರದ ಪಟ್ಟಿಗೆ ಸೇರ್ಪಡೆ ಮಾಡಿ ವಿವಿಧ ಕಂತುಗಳ ಬಿಡುಗಡೆ ಮಾಡಲು ವಿನಂತಿಸಿದರು.

     ವಿಧಾನಸಭೆಯ ಉಪಸಭಾಪತಿ ಆನಂದ ಮಾಮನಿ, ಬೆಳೆವಿಮೆಯಲ್ಲಿ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ನಡುವೆ ಪ್ರತಿವರ್ಷ ವ್ಯತ್ಯಾಸ ಕಂಡುಬರುತ್ತಿದೆ. ಇದನ್ನು ಸರಿಪಡಿಸುವಂತೆ ಕೋರಿದರು.ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕೆರೆಗಳು ಹಾಗೂ ಬಾಂದಾರಗಳು ಒಡೆದಿರುವುದರಿಂದ ಬೆಳೆ ಹಾನಿಯಾಗಿದೆ. ಆದ್ದರಿಂದ ಇವುಗಳ ಶಾಶ್ವತ ದುರಸ್ತಿಗೆ ಮತ್ತು ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.

      ಧಾರವಾಡ ಜಿಲ್ಲೆಯ ಶಾಸಕ ಅರವಿಂದ ಬೆಲ್ಲದ, ಮಳೆಯ ಪ್ರಮಾಣ ತಿಳಿಯಲು ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಗಮನಹರಿಸಬೇಕಿದೆ ಎಂದರು. ಜತೆಗೆ ಹುಬ್ಬಳ್ಳಿ-ಧಾರವಾಡ ರಸ್ತೆ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡಲು ಆಗ್ರಹಿಸಿದರು.

      ಶಾಸಕ ಶಂಕರಪಾಟೀಲ ಮುನೇನಕೊಪ್ಪ ಹಾಗೂ ಅಮೃತ ದೇಸಾಯಿ ಅವರು, ಪ್ರತಿ ಮಳೆಗಾಲದಲ್ಲಿ ಬೆಣ್ಣಿಹಳ್ಳದಿಂದ ಉದ್ಭವಿಸುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಮನವಿ ಮಾಡಿಕೊಂಡರು.ಶಾಸಕರಾದ ಮಹಾಂತೇಶ ಕೌಜಲಗಿ, ಮಹಾಂತೇಶ ದೊಡ್ಡಗೌಡ್ರ ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ಜಿಲ್ಲೆಯಲ್ಲಿ ಅತಿವೃಷ್ಟಿ ಪರಿಸ್ಥಿತಿ ಮತ್ತು ನಿರ್ವಹಣೆಯ ಸ್ಥಿತಿಗತಿಗಳನ್ನು ವಿವರಿಸಿದರು.

     ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಅತ್ಯಂತ ಮುತುವರ್ಜಿಯಿಂದ ಮಹಾರಾಷ್ಟ್ರ ಸರ್ಕಾರದ ಜತೆ ಸಮನ್ವಯ ಸಾಧಿಸಿದ್ದರಿಂದ ಪ್ರವಾಹ ನಿರ್ವಹಣೆ ಸಾಧ್ಯವಾಯಿತು. ಪ್ರವಾಹ ನಿರ್ವಹಣೆಗೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ನಮ್ಮ ಅಧಿಕಾರಿಗಳು ಮಹಾರಾಷ್ಟ್ರದ ಅಧಿಕಾರಿಗಳ ಜತೆ ಸತತ ಸಂಪರ್ಕದಲ್ಲಿ ಇದ್ದ ಪರಿಣಾಮ ಯಾವುದೇ ತೊಂದರೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ವಿವರಿಸಿದರು.

     ಕೈಮಗ್ಗ ಮತ್ತು ಜವಳಿ ಸಚಿವ ಶ್ರೀಮಂತ ಪಾಟೀಲ, ಸಂಸದರಾದ ಅಣ್ಣಾ ಸಾಹೇಬ್ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಪಿ.ರಾಜೀವ್, ದುರ್ಯೋಧನ ಐಹೊಳೆ, ಉಮೇಶ್ ಕತ್ತಿ, ಮಹಾಂತೇಶ ಕೌಜಲಗಿ, ಶಾಸಕ ಅನಿಲ್ ಬೆನಕೆ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಎಲ್.ಅತೀಕ್, ಮತ್ತಿತರರು ಉಪಸ್ಥಿತರಿದ್ದರು.

     ನಂತರ ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ, ಕೇಂದ್ರ ಸರ್ಕಾರದ ಎನ್.ಡಿ.ಅರ್ ನಿಯಮಾನುಸಾರ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು. ಬೆಳೆ ಪರಿಹಾರ ಸಲ್ಲಿಸುವಲ್ಲಿಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಕ್ರಮ ತೆಗೆದುಕೊಂಡು ಅದಷ್ಟು ತ್ವರಿತಗತಿಯಲ್ಲಿ ಪರಿಹಾರ ಒದಗಿಸಲಾಗುವುದು ಎಂದು ಹೇಳಿದರು.

     ಮೂರು ಜಿಲ್ಲೆಗಳಲ್ಲಿ ಇಂದು ವೈಮಾನಿಕ ಸಮೀಕ್ಷೆಯ ನಂತರ ಹಾನಿಯಾದ ಬಗ್ಗೆ ಮಾಹಿತಿ ಪಡೆದುಕೊಂಡು ಎಲ್ಲವನ್ನೂ ಕ್ರೋಢೀಕರಿಸಿ ಮುಂದಿನ ಪರಿಹಾರ ಕ್ರಮಗಳ ಬಗ್ಗೆ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದು ಹೇಳಿದರು. ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಹಲವಾರ ಜನರ ಮನೆಗಳು ಹಾನಿಯೊಳಗಾಗಿವೆ. ಈ ಬಗ್ಗೆ ಪರಿಹಾರಕ್ಕೆ ಮೊದಲು ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

     ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಕೋವಿಡ್-19 ಇರುವುದರಿಂದ ಎನ್.ಡಿ.ಆರ್.ಎಫ್. ಅನುದಾನದಡಿ ತುರ್ತು ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link