ಬೆಂಗಳೂರು:
ಐಎಂಎ ಕಂಪನಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ(ಎಸ್‌ಐಟಿ) ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ಅವರನ್ನು ಸೋಮವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.
ಇತ್ತೀಚೆಗಷ್ಟೇ ಉಪವಿಭಾಗಾಧಿಕಾರಿ ನಾಗರಾಜ್ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದರು. ಈಗ ಜಿಲ್ಲಾಧಿಕಾರಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಬಿಲ್ಡರ್ ಕೃಷ್ಣಮೂರ್ತಿ ಎಂಬಾತನನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಿಚಾರಣೆ ಸಂಬಂಧ ವಿಜಯ್ ಶಂಕರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ಮುಗಿದ ಬಳಿಕವೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಎಸ್ಐಟಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸದ್ಯ ನಾಗರಾಜ್ ಹಾಗೂ ಗ್ರಾಮ ಲೆಕ್ಕಿಗ ಮಂಜುನಾಥ್ ಎಸ್‌ಐಟಿ ವಶದಲ್ಲಿದ್ದು, ಅವರ ವಿಚಾರಣೆ ಬೆನ್ನಲ್ಲೇ ಜಿಲ್ಲಾಧಿಕಾರಿಯೊಬ್ಬರನ್ನು ವಿಚಾರಣೆಗೆ ಒಳಪಡಿಸುತ್ತಿರುವುದು ಇನ್ನಷ್ಟು ಕುತೂಹಲ ಮೂಡಿಸಿದೆ.
ಸೋಮವಾರ ಮುಂಜಾನೆ ವಿಜಯ್ ಶಂಕರ್ ಅವರನ್ನು ಎಸ್‌ಐಟಿ ವಿಚಾರಣೆಗೆ ಕರೆದೊಯ್ದಿತ್ತು. ಆರೋಪಿ ಮನ್ಸೂರ್ ಖಾನ್ ಅವರಿಗೂ, ಜಿಲ್ಲಾಧಿಕಾರಿಗಳಿಗೂ ಇರುವ ನಂಟಿನ ಕುರಿತು ಈವರೆಗೆ ಯಾವುದೇ ಮಹತ್ವದ ಸುಳಿವು ಲಭ್ಯವಾಗಿಲ್ಲ.
ಪ್ರಕರಣದಲ್ಲಿ ವಿಜಯ್‌ಶಂಕರ್ ಬಂಧನ ಮಾಡಿಲ್ಲ. ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟೀಸ್ ನೀಡಲಾಗಿತ್ತು. ಹೀಗಾಗಿ ವಿಚಾರಣೆ ಹಾಜರಾಗಿದ್ದರು. ಈ ವೇಳೆ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್‌ಐಟಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.