ಬೆಂಗಳೂರು
ಯುತಿರುವು ತೆಗೆದುಕೊಳ್ಳುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಬೈಕ್ನಲ್ಲಿ ಹೋಗುತ್ತಿದ್ದ ಮೂವರು ಯುವಕರಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಬಾಗಲಗುಂಟೆಯ ಪುನೀತ್ (17), ಚೇತನ್ (18)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ.ತಲೆಗೆ ಗಾಯಗೊಂಡಿರುವ ಶ್ರೀಧರ್ ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ.
ಮಧುಗಿರಿ ತಾಲ್ಲೂಕಿನ ತಗ್ಗಿಹಳ್ಳಿ ಮೂಲದ ಈ ಮೂವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು
ಬಾಗಲಗುಂಟೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದರು. ಊರಿಗೆ ಹೋಗಿದ್ದ ಈ ಮೂವರು ಒಂದೇ ಬೈಕ್ನಲ್ಲಿ ಬಾಗಲಗುಂಟೆಗೆ ರಾತ್ರಿ 11ರ ವೇಳೆ ಬರುತ್ತಿದ್ದಾಗ ಮಾರ್ಗ ಮಧ್ಯೆ ಎಡೇಹಳ್ಳಿ ಕ್ರಾಸ್ ಬಳಿ ಯು ತಿರುವು ತೆಗೆದುಕೊಳ್ಳುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಪುನೀತ್, ಚೇತನ್ ಸ್ಥಳದಲ್ಲಿಯೇ ಮೃತಪಟ್ಟರೆ ಹಿಂಬದಿಯಲ್ಲಿ ಕುಳಿತಿದ್ದ ಶ್ರೀಧರ್ ತಲೆಗೆ ಗಾಯಗೊಂಡಿದ್ದಾರೆ ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಾಗಿದ್ದು ಆತನನ್ನು ಬಂಧಿಸಿರುವ ನೆಲಮಂಗಲ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.