ಬೆಂಗಳೂರು:
ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆ ಹಾಗೂ ರಾಜ್ಯದಲ್ಲಿ ತಲೆದೋರಿರುವ ಬರಗಾಲ ಪರಿಸ್ಥಿತಿಯನ್ನು ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ನಡೆದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಕಂದಾಯ ಹಾಗೂ ಕೃಷಿ ಸಚಿವರು ಅಧಿಕಾರಿಗಳೊಂದಿಗೆ ನಿರಂತರವಾಗಿ ಸಭೆ ನಡೆಸುವ ಮೂಲಕ ಬರಗಾಲ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ.
ಕಳೆದ ಐದಾರು ತಿಂಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿತ್ತು. ಇದೇ ಮೊದಲ ಬಾರಿಗೆ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸಲಾಗಿದೆ ಎಂದು ತಿಳಿಸಿದರು.
ಮುಂಗಾರು ಕೃಷಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿತ್ತನೆ ಬೀಜ, ಗೊಬ್ಬರ ಕೊರತೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು. ರೈತರ ಸಾಲಮನ್ನಾ ಯೋಜನೆಯ ಫಲಾನುಭವಿಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡುವಲ್ಲಿ ಅಧಿಕಾರಿಗಳು ಮಹತ್ವದ ಪಾತ್ರ ವಹಿಸಿದ್ದು, ರಾಷ್ಟ್ರೀಕೃತ ಬ್ಯಾಂಕು ಹಾಗೂ ವಾಣಿಜ್ಯ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಬಾಕಿಯನ್ನು ಒಂದೇ ಕಂತಿನಲ್ಲಿ ಮನ್ನಾ ಮಾಡಲು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.
ನ್ಯಾಯ ಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುವ ಕುಟುಂಬದ ಫಲಾನುಭವಿಗಳು ಮತ್ತೊಮ್ಮೆ ಬಯೋಮೆಟ್ರಿಕ್ ನೀಡುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಜನಸಾಮಾನ್ಯರಿಗೆ ತೊಂದರೆ ಆಗದ ರೀತಿಯಲ್ಲಿ ಪರ್ಯಾಯ ವ್ಯವಸ್ಥೆ ರೂಪಿಸುವಂತೆ ಸಲಹೆ ನೀಡಿದರು. ಜಿಲ್ಲಾಧಿಕಾರಿ, ತಾಲೂಕು ಕಚೇರಿಯಲ್ಲಿ ರುವ ವ್ಯಾಜ್ಯಗಳ ಶ್ರೀಘ್ರ ಇತ್ಯಾರ್ಥಕ್ಕೆ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ ನೀಡಿದರು. ಸರ್ಕಾರಕ್ಕೆ ಮತ್ತಷ್ಟು ಚುರುಕು ನೀಡುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪುನರ್ ಆರಂಭಿಸುತ್ತಿರುವುದಾಗಿ ಮುಖ್ಯಮಂತ್ರಿ ಇದೇ ವೇಳೆ ತಿಳಿಸಿದರು.