ಬೆಂಗಳೂರು
ರಾಮನಗರ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಹಣ ಮತ್ತು ಅಧಿಕಾರದ ಅಮಿಷ ಒಡ್ಡಿ ಕಣದಿಂದ ಹಿಂದೆ ಸರಿಯುವಂತೆ ಮಾಡಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ. ರುದ್ರೇಶ್ ಆರೋಪ ಮಾಡಿದ್ದಾರೆ.
ರಾಮನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ಕಣದಿಂದ ಹಿಂದೆ ಸರಿಯುವಲ್ಲಿ ಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಪಾತ್ರ ಇದೆ ಎಂದು ಟೀಕಿಸಿದ್ದಾರೆ.
ಸೋಲಿನ ಹತಾಶೆಯಿಂದ ಬಿಜೆಪಿ ಅಭ್ಯರ್ಥಿಗೆ ಇಲ್ಲಸಲ್ಲದ ಆಮಿಷ ಒಡ್ಡಿ ಕಣದಿಂದ ಹಿಂದೆ ಸರಿಯುವಂತೆ ಮಾಡಿ ಜನರ ಭಾವನೆಗಳಿಗೆ ವಿರುದ್ದವಾಗಿ ನಡೆದುಕೊಳ್ಳಲಾಗಿದೆ. ಈ ಕ್ರಮ ಪ್ರಜಾಪ್ರಭುತ್ವಕ್ಕೆ ಶೋಭೆ ತರುವುದಿಲ್ಲ ಎಂದು ಅವರು ಹೇಳಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಯಾವುದೇ ಆಲೋಚನೆ ಮಾಡಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟ ಪಡಿಸಿದರು.