ಬೆಂಗಳೂರು
ಮುಂದಿನ ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಬೇಕಾದ ಕಾರ್ಯತಂತ್ರ ರೂಪಿಸಲು ಇದೇ 13 ರಂದು ಬಿಜೆಪಿ ಕೋರ್‍ಕಮಿಟಿ ಸಭೆ ನಡೆಯಲಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಕಲಬುರಗಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿಗೆ ಮುಕ್ತಾಯಗೊಂಡ ಮೂರು ಲೋಕಸಭೆ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳ ಫಲಿತಾಂಶದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ಪಕ್ಷದಲ್ಲಿನ ಒಗ್ಗಟ್ಟಿನ ಕೊರತೆಯಿಂದಾಗಿ ಇತ್ತೀಚಿನ ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲು ಉಂಟಾಯಿತು ಎಂಬ ವರದಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ಆಡಳಿತಾರೂಢ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದರಿಂದ ಬಿಜೆಪಿಗೆ ನಿರೀಕ್ಷಿ ಗೆಲುವು ದೊರಕಲಿಲ್ಲ ಎಂದರು.
ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಂಡು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಧೃಡಗೊಳಿಸಲು ಬೇಕಾದ ಕಾರ್ಯಕ್ರಮಗಳನ್ನು ಹಾಕಿಕೊಳ್ಳುವುದಾಗಿ ಅವರು ಹೇಳಿದರು.
ಬಿಜೆಪಿ ಸೋಲಿಸಲು ಮಹಾಘಟ ಬಂದನ್ ಪ್ರಯತ್ನದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇಂತಹ ಹೊಂದಾಣಿಕೆ ರಾಷ್ಟ್ರಮಟ್ಟದಲ್ಲಿ ಯಶಸ್ವಿಯಾಗುವುದಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ ವಿಶ್ವಾಸವನ್ನು ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
