ಬಿಜೆಪಿ ನಾಯಕರು ಬಹಿರಂಗವಾಗಿ ಕ್ಷಮೆಯಾಚಿಸಬೇಕು : ದಿನೇಶ್ ಗುಂಡೂರಾವ್

ಬೆಂಗಳೂರು

    ಡಿವೈ ಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರ ಪಾತ್ರವಿಲ್ಲ ಎಂದು ಸಿಬಿಐ ವರದಿ ನೀಡಿದ್ದು, ಜಾರ್ಜ್ ವಿರುದ್ಧ ಅನಗತ್ಯ ಆರೋಪ ಮಾಡಿದ್ದ ಬಿಜೆಪಿ ನಾಯಕರು ಈಗ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಜಾರ್ಜ್ ಅವರ ಕೈವಾಡ ಇಲ್ಲ ಎನ್ನುವುದು ಗೊತ್ತಿದ್ದರೂ ಬಿಜೆಪಿ ಅನಗತ್ಯ ಆರೋಪ ಮಾಡಿ, ಅವರ ತೇಜೋವಧೆ ಮಾಡುವ ಪ್ರಯತ್ನ ನಡೆಸಿತ್ತು. ಈಗ ಸಿಬಿಐ ನವರೆ ಇದರಲ್ಲಿ ಜಾರ್ಜ್ ಕೈವಾಡ ಇಲ್ಲ ಎಂದು ವರದಿ ಕೊಟ್ಟಿದ್ದಾರೆ. ಈಗ ಬಿಜೆಪಿಯವರಿಗೆ ನೈತಿಕತೆ ಇದ್ದಿದ್ದೆ ಆದಲ್ಲಿ ಕ್ಷಮೆ ಕೇಳಬೇಕು. ಇಂಥ ಪ್ರಕರಣದಲ್ಲಿ ವಿವೇಚನೆಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ತೇಜೋವಧೆ ಮಾಡುವ ಪ್ರಯತ್ನ ಮಾಡುವುದು ಸರಿಯಲ್ಲ ಎಂದು ತಿಳಿ ಹೇಳಿದರು.

    ಶಾಸಕ ತನ್ವೀರ್ ಸೇಠ್ ಮೇಲಿನ ಹಲ್ಲೆ ಪ್ರಕರಣದಲ್ಲಿಯೂ ಬಿಜೆಪಿ ಇದೇ ರೀತಿ ನಡೆದುಕೊಳ್ಳುತ್ತಿದೆ. ಬಿಜೆಪಿಯವರು ಮೊದಲು ಸತ್ಯಾಸತ್ಯತೆ ಅರಿಯಬೇಕು. ಮುಖ್ಯಮಂತ್ರಿಯಂತಹ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ಸಿದ್ದರಾಮಯ್ಯ ವಿರುದ್ಧ ಬಿ.ಎಸ್. ಯಡಿಯೂರಪ್ಪ ವಿನಾಕಾರಣ ಆರೋಪ ಮಾಡುವುದು ಸರಿಯಲ್ಲ. ಈ ಪ್ರಕರಣದಲ್ಲಿ ಯಾರೆ ಇದ್ದರೂ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಅವರ ಹಿಂದೆ ಯಾರ ಕೈವಾಡ ಇದೆ ಎನ್ನುವುದು ತನಿಖೆಯಿಂದ ಹೊರಬರಲಿ ಎಂದು ಒತ್ತಾಯಿಸಿದರು.

    ಹೊಸಕೋಟೆ ಅನರ್ಹ ಶಾಸಕ ಎಂಟಿಬಿ ನಾಗರಾಜ್ ತಮ್ಮ ಬಳಿ ದುಡ್ಡಿದೆ ಎಂಬ ಕಾರಣಕ್ಕಾಗಿ ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಅವರು ಯಾರಿಗೆ ಎಷ್ಟು ದುಡ್ಡು ಕೊಟ್ಟಿದ್ದಾರೆ ಎನ್ನುವುದನ್ನು ಸ್ಪಷ್ಟಪಡಿಸಲಿ. ಚುನಾವಣೆ ಅಫಿಡವಿಟ್‍ನಲ್ಲಿ ಅವರು ಹಣ ಕೊಟ್ಟಿರುವ ಬಗ್ಗೆ ಉಲ್ಲೇಖಿಸಬೇಕಿತ್ತು. ಅದು ಬಿಟ್ಟು ಹಣದ ಅಹಂನಿಂದ ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದರು.

    ಕೆಪಿಸಿಸಿ ವತಿಯಿಂದ ಎಲ್ಲಾ ಕ್ಷೇತ್ರಗಳಲ್ಲಿ ಎಲ್ಲಾ ನಾಯಕರು ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಇದೇ 24 ರಿಂದ ಪ್ರಚಾರದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ಹಿರಿಯ ನಾಯಕರು ಕ್ಷೇತ್ರಗಳ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಶುಕ್ರವಾರ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನಗರಕ್ಕೆ ಆಗಮಿಸಲಿದ್ದು, ಅವರು ಬಂದ ಮೇಲೆ ಎಲ್ಲರೂ ಒಗ್ಗಟ್ಟಾಗಿ ಹೆಚ್ಚಿನ ಸ್ಥಾನ ಗೆಲ್ಲಲು ಶ್ರಮಿಸುವುದಾಗಿ ದಿನೇಶ್ ಗುಂಡೂರಾವ್ ಹೇಳಿದರು.

     ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚುನಾವಣಾ ಆಯೋಗ ನಿಷ್ಕ್ರಿಯವಾಗಿದೆ, ಇಲ್ಲವೇ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆಯೇ ಎಂಬುದು ಗೊತ್ತಾಗುತ್ತಿಲ್ಲ. ಪ್ರತಿಪಕ್ಷಗಳ ಅಭ್ಯರ್ಥಿಗಳ ಬಿಜೆಪಿ ಮೇಲಿಂದ ಮೇಲೆ ನಾಮಪತ್ರ ಹಿಂಪಡೆಯುವಂತೆ ಬಿಜೆಪಿ ಒತ್ತಡ ಹೇರುತ್ತಿದೆ. ಹಲವು ಕ್ಷೇತ್ರಗಳಲ್ಲಿ ಇಂತಹ ಪ್ರಯತ್ನ ನಡೆಯುತ್ತಿದ್ದರೂ ಚುನಾವಣಾ ಆಯೋಗ ಕಣ್ಮುಚ್ಚಿ ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಹಿರೆಕೆರೂರು, ಹೊಸಕೋಟೆ, ಗೋಕಾಕ್ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಮುಖ್ಯಮಂತ್ರಿ ಪುತ್ರ ವಿಜಯೇಂದ್ರ ಹಾಗೂ ಲಿಂಗಾಯತ ಸಮುದಾಯದ ಸ್ವಾಮೀಜಿಗಳೇ ಒತ್ತಡ ತರುತ್ತಿದ್ದಾರೆ. ಇದನ್ನು ನೋಡಿಯೂ ಆಯೋಗ ಸುಮ್ಮನಿರುವುದೇಕೆ ? ಎಂದು ಪ್ರಶ್ನಿಸಿದರು.

    ಪಕ್ಷದ ಶಾಸಕಾಂಗ ನಾಯಕ ಸಿದ್ದರಾಮಯ್ಯ, ಹಿರಿಯ ನಾಯಕರಾದ ಮುನಿಯಪ್ಪ, ನಂಜೇಗೌಡ ಅವರಿಗೆ ಸಾಲ ಕೊಟ್ಟಿರುವುದಾಗಿ ಹೇಳಿರುವ ಎಂಟಿಬಿ ನಾಗರಾಜ್, ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಸಾಲದ ಬಗ್ಗೆ ಪ್ರಸ್ತಾಪ ಮಾಡದೇ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ಕೊಟ್ಟಿದ್ದಾರೆ. ಆಯೋಗಕ್ಕೆ ತಪ್ಪು ಮಾಹಿತಿ ಕೊಟ್ಟಿರುವುದರಿಂದ ಎಂಟಿಬಿ ನಾಗರಾಜ್ ಅವರ ನಾಮಪತ್ರ ತಿರಸ್ಕರಿಸಬೇಕು. ಸಾಲಕೊಟ್ಟ ಬಗ್ಗೆ ಸಿಬಿಐ, ಇಡಿ ಐಟಿ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap