ಬೆಂಗಳೂರು
ಕೇಂದ್ರ ಸರ್ಕಾರದ ಇಂಧನ ದರ ಏರಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಜ್ಯ ಕಾಂಗ್ರೆಸ್‍ಗೆ ತಿರುಗೇಟು ನೀಡಲು ರಾಜ್ಯ ಬಿಜೆಪಿ ಸಜ್ಜಾಗಿದೆ. ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಿ, ಶುಕ್ರವಾರ ಆದೇಶ ಹೊರಡಿಸಿದ್ದು, ಸರ್ಕಾರದ ಇಂಧನ ದರ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಜ.6 ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ತಿಳಿಸಿದ್ದಾರೆ.ಮಲ್ಲೇಶ್ವರಂನ ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 2 ತಿಂಗಳಿನಿಂದ ಇಳಿಮುಖವಾಗಿದ್ದ ಪೆಟ್ರೋಲ್, ಡಿಸೇಲ್ ದರಗಳನ್ನು ಸರ್ಕಾರ ಏಕಾಏಕಿ ಹೆಚ್ಚಿಸಿ ಸಾಮಾನ್ಯ ಗ್ರಾಹಕರಿಗೆ ಬರೆ ಎಳೆದಿದೆ ಎಂದು ಸರ್ಕಾರದ ನಡೆಯನ್ನು ಟೀಕಿಸಿದರು.
ಸಮ್ಮಿಶ್ರ ಸರ್ಕಾರ ಹಿಂದೆ ದರ ಏರಿಕೆಯಿಂದ ಜನಸಾಮಾನ್ಯರಿಗೆ ಹೊರೆಯಾಗಿದೆ ಎಂದು ಶೇ.2 ರಷ್ಟು ತೆರಿಗೆಯನ್ನು ಇಳಿಕೆ ಮಾಡಿತ್ತು. ಆದರೆ ಈಗ ಪುನ: ತೆರಿಗೆ ಹೊರೆಯನ್ನು ಗ್ರಾಹಕರ ಮೇಲೆ ಹಾಕುವ ಮೂಲಕ ಜನಸಾಮಾನ್ಯರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಅವರು ಆರೋಪಿಸಿದರು.ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ತೆರಿಗೆ ಹೆಚ್ಚಳದ ತೀರ್ಮಾನವನ್ನು ಕಾಂಗ್ರೆಸ್ ನಾಯಕರು ಬೆಂಬಲಿಸುತ್ತಾರೆಯೇ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ರವಿಕುಮಾರ್ ಒತ್ತಾಯಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ