ಚಿತ್ರದುರ್ಗ
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಭ್ರೂಣ ಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಅನುಮತಿ ಪಡೆದು, ಜಿಲ್ಲೆಯ ಎಲ್ಲ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್ ನಿರ್ವಹಿಸುವ ವೈದ್ಯರುಗಳಿಗೆ ಜಿಲ್ಲಾ ಮಟ್ಟದ ಕಾರ್ಯಗಾರ ಏರ್ಪಡಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾದ ಪಿಸಿಪಿಎನ್‍ಡಿಟಿ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧವಾಗಿದ್ದು, ಈ ಕುರಿತು ನಗರ ಮತ್ತು ಪಟ್ಟಣಗಳಲ್ಲಿ ಸಾರ್ವಜನಿಕರಿಗೆ ಕಾನೂನು ನಿಯಮಗಳನ್ನು ಹೇಗೆ ಪಾಲಿಸಬೇಕೆಂಬುದನ್ನು ಸಾರ್ವಜನಿಕ ಸ್ಥಳಗಳಾದ ಬಸ್‍ಸ್ಟ್ಯಾಂಡ್, ಆಸ್ಪತ್ರೆ, ಸರ್ಕಾರಿ ಕಚೇರಿಗಳ ಗೋಡೆಗಳ ಮೇಲೆ ಜಾಗೃತಿ ಸಂದೇಶಗಳನ್ನು ಬಿತ್ತರಿಸಲಾಗುವುದೆಂದು ಡಾ. ಪಾಲಾಕ್ಷ ಹೇಳಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ: ಸುಧಾ ಮಾತನಾಡಿ ಚಳ್ಳಕೆರೆಯ ಲಕ್ಷ್ಮಿ ಶ್ರೀನಿವಾಸ ನರ್ಸಿಂಗ್ ಹೋಂನಲ್ಲಿ ಭ್ರೂಣ ಪತ್ತೆ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ವಿವಿಧ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗಳ ಸ್ಥಾಪನೆ ಹಾಗೂ ನವೀಕರಣ ಕುರಿತಂತೆ ಸ್ಥಳ ಹಾಗೂ ನಿಯಮಗಳ ಪಾಲನೆಯನ್ನು ಖುದ್ದು ಪರಿಶೀಲಿಸಿ ಬಳಿಕವೇ ಅನುಮತಿ ನೀಡಿಕೆಗೆ ಕ್ರಮ ವಹಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.ಸಭೆಯಲ್ಲಿ ಡಾ: ಬಿ.ಎಸ್.ಶಶಿಕಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ತಜ್ಞ ಡಾ: ದೇವರಾಜ್, ಡಾ. ಸತ್ಯನಾರಾಯಣ್ ಉಪಸ್ಥಿತರಿದ್ದರು.