ದಾವಣಗೆರೆ :
ಲೋಕಸಭಾ ಚುನಾವಣೆಗೆ ಇಂದು ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಬಹುಜನ ಸಮಾಜ ಪಕ್ಷದ ಅಭ್ಯರ್ಥಿ, ನಿವೃತ್ತ ಕಂದಾಯಾಧಿಕಾರಿ ಬಿ.ಹೆಚ್.ಸಿದ್ದಪ್ಪ ನಾಮಪತ್ರ ಸಲ್ಲಿಸಲಿದ್ದಾರೆಂದು ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಮಲ್ಲೇಶ್ ತಿಳಿಸಿದರು.
ಈ ಕುರಿತು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದರು.ಈ ಬಾರಿಯ ಚುನಾವಣೆಯಲ್ಲಿ ಬಿಎಸ್‍ಪಿ ಪಕ್ಷವನ್ನು ಬೆಂಬಲಿಸುವ ಮೂಲಕ ಬಹುಸಂಖ್ಯಾತ ಕೆಳವರ್ಗಗಳಿಗೆ ರಾಜಕೀಯ ಶಕ್ತಿ ತುಂಬಬೇಕೆಂದು ಮನವಿ ಮಾಡಿದರು.
ಸ್ವಾತಂತ್ರ್ಯ ಬಂದಾಗಿನಿಂದಲೂ ದೇಶದ ಅಲಕ್ಷಿತ ಸಮುದಾಯಗಳ ಜನರ ಜೀವನದಲ್ಲಿ ಸಣ್ಣ ಪ್ರಮಾಣದ ಬದಲಾವಣೆಯೂ ಆಗಿಲ್ಲ. ಇಂದಿಗೂ ಬಡತನ, ಶೋಷಣೆಯ ಮುಂದುವರೆದಿವೆ. ಜನಪ್ರತಿನಿಧಿಗಳು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ಸಾಮಾಜಿಕ ಸಾಮರಸ್ಯ ಹಾಳು ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದಲಿತ, ಹಿಂದುಳಿದ, ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಗಳು ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕೆಂದು ಅವರು ಕೋರಿದರು.ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಪರಶುರಾಮ ಕೋಟೆಮಲ್ಲೂರು, ಮೋಹನ್ ದಾಸ್, ಬುಳಸಾಗರ ಸಿದ್ದರಾಮಣ್ಣ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








