ಬೆಂಗಳೂರು
ದೇಶವು ಆರ್ಥಿಕವಾಗಿ ದಿವಾಳಿಯಾಗಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿರುವಾಗ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತರಲು ಮುಂದಾಗಿರುವ ಕೇಂದ್ರ ಸರ್ಕಾರ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ದೂರಿದರು.
ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಕ್ವಿನ್ಸ್‌ರಸ್ತೆಯ ಪಕ್ಷದ ಕಚೇರಿ ಮುಂಭಾಗ ಬುಧವಾರ ಆಯೋಜಿಸಿದ್ದ ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿದರು.
ದೇಶದ ಆರ್ಥಿಕ ಪರಿಸ್ಥಿತಿಯ ಸುಧಾರಣೆಗೆ ಯಾವುದೇ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರ ಜನರ ಮನಸ್ಸನ್ನು ಬೇರೆಡೆ ಸೆಳೆಯಲು ಪೌರತ್ವ ತಿದ್ದುಪಡಿ ಕಾಯ್ದೆಯಂತಹ ವಿವಾದಾತ್ಮಕ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿದೆ ಎಂದು ದೂರಿದರು.
ಪಕ್ಷದ ಉಪಾಧ್ಯಕ್ಷ ಬಿ.ಎಲ್. ಶಂಕರ್ ಮಾತನಾಡಿ ದೇಶದ ಪೌರತ್ವ ಪಡೆಯಲು ಯಾರೂ ಅರ್ಹರು ಎಂಬುದು ಸಂವಿಧಾನದಲ್ಲೇ ಸ್ಪಷ್ಟವಾಗಿರುವಾಗ ಅನಗತ್ಯವಾಗಿ ಪೌರತ್ವ ತಿದ್ದುಪಡಿ ಕಾಯ್ದೆ ತರಲು ಹೊರಟಿದೆ ಎಂದು ದೂರಿದರು. ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡು ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ