ಚಿತ್ರದುರ್ಗ;
ಕೋಟೆನಾಡು ಚಿತ್ರದುರ್ಗದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚುತ್ತಿರುವಂತೆ ಚುನಾವಣೆಯ ಕಣವೂ ರಂಗೇರುತ್ತಿದೆ. ಕಾಂಗ್ರೆಸ್ ಹಾಗೂ ಜಾತ್ಯಾತೀತ ಜನತಾ ದಳದ ಮೈತ್ರಿ ಅಭ್ಯರ್ಥಿಯಾಗಿರುವ ಹಾಲಿ ಸಂಸದ ಬಿ.ಎನ್.ಚಂದ್ರಪ್ಪ ಅವರು ಇಂದು (ಸೋಮವಾರ) ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ
ಬೆಳಿಗ್ಗೆ 11 ಗಂಟೆಗೆ ನಗರದ ಕನಕ ವೃತ್ತದಿಂದ ಭಾರೀ ಮೆರವಣಿಗೆಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಮೆರವಣಿಗೆಯಲ್ಲಿ ಪಾವಗಡ, ಶಿರಾ ಸೇರಿದಂತೆ ಲೋಕಸಭಾ ಕ್ಷೇತ್ರವ್ಯಾಪ್ತಿಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದಲೂ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೆರವಣಿಗೆಯ ಬಳಿಕ ಜಿಲ್ಲಾಧಿಕಾರಿಗಳ ಕಚೇರಿ ಬಳಿಯ ವೃತ್ತದಲ್ಲಿ ನಡೆಯುವ ಬಹಿರಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡುರಾವ್, ಈಶ್ವರಖಂಡ್ರೆ, ಮಾಜಿ ಸಚಿವ ಹೆಚ್.ಆಂಜನೇಯ, ಶಾಸಕ ಟಿ.ರಘುಮೂರ್ತಿ,ಮಾಜಿ ಶಾಸಕರಾದ ಡಿ.ಸುಧಾಕರ್, ಬಿ.ಜಿ.ಗೋವಿಂದಪ್ಪ, ತಿಪ್ಪೇಸ್ವಾಮಿ, ಕೆಪಿಸಿಸಿ ಕಾರ್ಯದರ್ಶಿ ಹನುಮಲಿ ಷನ್ಮುಖಪ್ಪ ಸೇರಿದಂತೆ ಹಲವಾರು ನಾಯಕರು ಭಾಗವಹಿಸಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆಯ ಹಿನ್ನಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರದಂದು ನಡೆದ ಸಭೆಯಲ್ಲಿ, ಎಲ್ಲಾ ತಾಲ್ಲೂಕುಗಳಿಂದಲೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ ಶ್ರಮಿಸುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಫಾತ್ಯರಾಜನ್ ಕರೆ ನೀಡಿದರು
ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಹಾಗೂ ಹಿರಿಯ ಕಾರ್ಯಕರ್ತರು ಸಹ ಭಾಗವಹಿಸಲು ಅವರು ಕೋರಿದರು
ಕೆಪಿಸಿಸಿ ಕಾರ್ಯದರ್ಶಿ ಹನುಮಲಿ ಷನ್ಮುಖಪ್ಪ, ಡಿ.ಎನ್.ಮೈಲಾರಪ್ಪ, ಸಂಪತ್‍ಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮೀನಾಕ್ಷಿ ಸೇರಿದಂತೆ ಇತರೆ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು